ವಿದ್ಯಾರ್ಥಿನಿ ಮಧು ನಿಗೂಢ ಸಾವು ಪ್ರಕರಣ: ನ್ಯಾಯಕ್ಕಾಗಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Update: 2019-04-27 17:14 GMT

ಬೆಂಗಳೂರು, ಎ.27: ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಸಾವಿನ ಪ್ರಕರಣ ಸಂಬಂಧ ನೈಜ ತನಿಖೆ ನಡೆಸಿ ಸತ್ಯಾಂಶ ಬಯಲಿಗೆಳೆದು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿದವು.

ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಲಿಂಗಾಯತ ಮಹಿಳಾ ಒಕ್ಕೂಟ, ಜನ್ಮ ಭೂಮಿ ಫೌಂಡೇಶನ್ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಧು ಪತ್ತಾರ ಸಾವಿಗೆ ತ್ವರಿತವಾಗಿ ನ್ಯಾಯ ಒದಗಿಸುವಂತೆ ಒತ್ತಾಯ ಮಾಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಾಚೀಗೌಡ, ಇಡೀ ದೇಶವು ವಿದ್ಯಾರ್ಥಿನಿ ಸಾವನ್ನು ಖಂಡಿಸಿದ್ದು, ಎಲ್ಲೆಡೆಯಲ್ಲೂ ಪ್ರಕರಣ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯಾರ್ಥಿನಿ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲಾಯಿತು. ಆದರೆ, ಹೋರಾಟ ತೀವ್ರಗೊಂಡ ನಂತರ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸಿಐಡಿ ತಂಡ ಪ್ರಕರಣದ ತನಿಖೆ ನಡೆಸುತ್ತಿರುವುದಾದರೂ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ಶೀಘ್ರ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News