×
Ad

ಸರಕಾರದ ವಿರುದ್ಧ ಚು.ಆಯೋಗಕ್ಕೆ ದೂರು ನೀಡಲು ಬಿಜೆಪಿ ಸಿದ್ಧತೆ

Update: 2019-04-28 18:27 IST

ಬೆಂಗಳೂರು, ಎ.28: ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬಿಬಿಎಂಪಿಯಲ್ಲಿ ‘ಮುಖ್ಯಮಂತ್ರಿಗಳ ನವ ಬೆಂಗಳೂರು’ ಯೋಜನೆಯಡಿ ಪ್ರಾರಂಭಿಸಲು ಉದ್ದೇಶಿಸಿರುವ ಕಾಮಗಾರಿಗಳಿಗೆ ಅವಕಾಶ ನೀಡಬಾರದೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ಭೇಟಿ ಮಾಡಿ ದೂರು ನೀಡಲಿದೆ.

ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್‌ರನ್ನು ಭೇಟಿ ಮಾಡಲಿರುವ, ಬಿಜೆಪಿ ಮುಖಂಡರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ, ಎಸ್.ಮುನಿರಾಜು, ಸದಾಶಿವ, ಕುಡಿಯುವ ನೀರು ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಹೊರತುಪಡಿಸಿ, ಬೇರೆ ಕಾಮಗಾರಿಗಳಿಗೆ ಅನುಮತಿ ನೀಡಬಾರದೆಂದು ಮನವಿ ಮಾಡಲಿದ್ದಾರೆ.

ಶನಿವಾರ ಪಾಲಿಕೆ ಸಭೆಯಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಮತ್ತು ಎಸ್‌ಐಪಿ ಯೋಜನೆಯಡಿ 4261 ಕೋಟಿ ರೂ., ಮೊತ್ತದ ಕಾಮಗಾರಿಯನ್ನು ಕೆಆರ್‌ಐಡಿಎಲ್ ಸಂಸ್ಥೆಗೆ ನೀಡಿರುವುದರಿಂದ, ಟೆಂಡರ್ ಇಲ್ಲದೆ ಕಾಮಗಾರಿ ನಡೆಸಲು ಪ್ರಾರಂಭಿಸಿರುವುದು ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ.

ಮೇ 27ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸಬೇಕು. ಈ ಕಾಮಗಾರಿಗಳನ್ನು ಆರಂಭಿಸಲು ಮುಂದಾಗಿರುವುದರ ಹಿಂದೆ ಭ್ರಷ್ಟಾಚಾರ ನಡೆಯುವ ಸಾಧ್ಯತೆಯಿದೆ ಎಂದು ಅವರು ದೂರಿದ್ದಾರೆ.

ಮಳೆಗಾಲದಲ್ಲಿ ಅನಾಹುತ ಸಂಭವಿಸದಂತೆ ತಡೆಯಲು ರಾಜಕಾಲುವೆ ಹೂಳೆತ್ತುವ, ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳಬೇಕಿರುವುದರಿಂದ ಟೆಂಡರ್ ಕರೆಯಲು ತೀರ್ಮಾನಿಸಿದ್ದೇವೆ ಎಂದು ಪಾಲಿಕೆ ಮೇಯರ್ ಹೇಳಿರುವುದು ನೇರವಾಗಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಯಾರ ಹಿತವನ್ನು ಕಾಪಾಡಲು ಸರಕಾರ ಮತ್ತು ಬಿಬಿಎಂಪಿ ಹೊರಟಿದೆ ಎಂದು ಅವರು ಪ್ರಕಟನೆಯಲ್ಲಿ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News