ಸಮ್ಮಿಶ್ರ ಸರಕಾರ ರಕ್ಷಣೆಗೆ ಕಾಂಗ್ರೆಸ್-ಜೆಡಿಎಸ್ ಮುಖಂಡರ ಚರ್ಚೆ

Update: 2019-04-28 13:11 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.28: ರಾಜ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲದ ಭೀತಿ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಮುಖ ನಾಯಕರು, ರವಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಮಹತ್ವದ ಸಭೆ ನಡೆಸಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ, ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ, ಶಾಸಕ ಎಸ್.ಟಿ. ಸೋಮಶೇಖರ್ ಕರೆದಿರುವ ಸಮಾನ ಮನಸ್ಕ ಶಾಸಕರ ಸಭೆ, ಆಪರೇಷನ್ ಕಮಲ, ಲೋಕಸಭಾ ಚುನಾವಣೆಯಲ್ಲಿನ ಫಲಿತಾಂಶ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಅಸಹಕಾರದ ವಿಚಾರಗಳು ಚರ್ಚೆಯಾಗಿವೆ ಎಂದು ತಿಳಿದು ಬಂದಿದೆ.

ಮಂಡ್ಯ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವುದು ನಿಶ್ಚಿತ. ಆದರೆ, ಗೆಲುವಿನ ಅಂತರ ಕಡಿಮೆಯಾಗಬಹುದು. ಸ್ಥಳೀಯ ಕಾಂಗ್ರೆಸ್ ನಾಯಕರ ಸಹಕಾರ ಸಿಕ್ಕಿದ್ದರೆ, ಆತನ ಗೆಲುವಿನ ಬಗ್ಗೆ ಯಾರೂ ಚರ್ಚೆ ಮಾಡಬೇಕಾದ ಅಗತ್ಯವೇ ಇರುತ್ತಿರಲಿಲ್ಲ ಎಂದು ವೇಣುಗೋಪಾಲ್‌ಗೆ ಕುಮಾರಸ್ವಾಮಿ ದೂರು ನೀಡಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರ ಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಬಹಿರಂಗವಾಗಿ ನಿಖಿಲ್ ಪರವಾಗಿ ಕೆಲಸ ಮಾಡಲಿಲ್ಲ. ಬಹಿರಂಗವಾಗಿ ಕೆಲವು ಪ್ರಮುಖ ಕಾಂಗ್ರೆಸ್ ನಾಯಕರು, ನಮ್ಮ ವಿರೋಧಿಗಳ ಪರವಾಗಿ ಕೆಲಸ ಮಾಡಿದ್ದಾರೆ. ನಿಮ್ಮ ಮುಖಂಡರನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಎಸ್.ಟಿ.ಸೋಮಶೇಖರ್ ಸಮಾನ ಮನಸ್ಕ ಶಾಸಕರ ಸಭೆ ಕರೆದಿರುವ ವಿಚಾರದ ಕುರಿತು ಚರ್ಚೆ ನಡೆಸಲಾಗಿದ್ದು, ಯಾವುದೇ ಕಾರಣಕ್ಕೂ ಈ ಸಭೆ ನಡೆಸಲು ಅವಕಾಶ ಕಲ್ಪಿಸಬಾರದು. ಇಲ್ಲದಿದ್ದರೆ, ಜನರಿಗೆ ಸರಕಾರ ಹಾಗೂ ನಮ್ಮ ಪಕ್ಷದ ಬಗ್ಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಕೆಲವು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆ.ಸಿ.ವೇಣುಗೋಪಾಲ್ ಜೊತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News