104 ಶಾಸಕರಿಗೂ ಪ್ರಚಾರದ ಹೊಣೆ ವಹಿಸಿದ ಬಿಎಸ್‌ವೈ

Update: 2019-04-30 12:38 GMT

ಬೆಂಗಳೂರು, ಎ.30: ಆಡಳಿತರೂಢ ಕಾಂಗ್ರೆಸ್-ಜೆಡಿಎಸ್ ಹಾಗೂ ಪ್ರತಿಪಕ್ಷ ಬಿಜೆಪಿ ಪಾಲಿಗೆ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿರುವ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು 104 ಶಾಸಕರಿಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜವಾಬ್ದಾರಿ ವಹಿಸಿದ್ದಾರೆ.

ಮೇ 6 ರಿಂದ 17ರವರೆಗೂ ನಡೆಯಲಿರುವ ಬಹಿರಂಗ ಪ್ರಚಾರದಲ್ಲಿ ಎರಡು ಕ್ಷೇತ್ರಗಳಲ್ಲಿ ಎಲ್ಲ ಶಾಸಕರು ಸಕ್ರಿಯವಾಗಿ ಪಾಲ್ಗೊಂಡು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಬೇಕು ಎಂದು ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಪಾಲಿಗೆ ಎರಡು ಕ್ಷೇತ್ರಗಳು ಪ್ರಮುಖವಾದದ್ದು. ಸಚಿವ ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾಗಿರುವ ಕುಂದಗೋಳ ಕ್ಷೇತ್ರಕ್ಕೆ ಅವರ ಪತ್ನಿ ಕುಸುಮಾ ಶಿವಳ್ಳಿಯನ್ನೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರದಿಂದ ಸುಭಾಷ್ ರಾಠೋಡ್ ಸ್ಪರ್ಧಿಸುತ್ತಿದ್ದಾರೆ.

ಕುಂದಗೋಳ ಕ್ಷೇತ್ರದಲ್ಲಿ ಕಳೆದ ಬಾರಿ ಅತ್ಯಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದ ಎಸ್.ಐ.ಚಿಕ್ಕನಗೌಡರ್ ಅವರನ್ನೆ ಬಿಜೆಪಿ ಕಣಕ್ಕಿಳಿಸಿದೆ. ಅಲ್ಲದೆ, ಚಿಂಚೋಳಿಯಲ್ಲಿ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಸ್ಪರ್ಧಿಸುತ್ತಿದ್ದಾರೆ.
ಈ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯು ಜಿದ್ದಾಜಿದ್ದಿನ ಕಣವಾಗಿದ್ದು, ಸಮ್ಮಿಶ್ರ ಸರಕಾರದ ಪಾಲಿಗಂತು ಈ ಎರಡು ಕ್ಷೇತ್ರಗಳನ್ನು ಗೆಲ್ಲುವುದು ಅನಿವಾರ್ಯವಾಗಿದೆ. ಜೊತೆಗೆ, ಬಿಜೆಪಿಯು ಈ ಎರಡು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ತನ್ನ ಬಲ ವೃದ್ಧಿಸಿಕೊಳ್ಳುವ ತವಕದಲ್ಲಿದೆ.
ಮೇ 19ರಂದು ಉಪ ಚುನಾವಣೆಯ ನಡೆಯಲಿದ್ದು, ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮೇ 23ರಂದೆ ಈ ಎರಡು ಕ್ಷೇತ್ರಗಳ ಫಲಿತಾಂಶವು ಪ್ರಕಟವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News