ವಿವಿಪ್ಯಾಟ್ ಸ್ಲಿಪ್: ಮುಂದಿನ ವಾರ ವಿಚಾರಣೆಗೆ ಸುಪ್ರೀಂ ಸಮ್ಮತಿ

Update: 2019-05-03 16:38 GMT

ಹೊಸದಿಲ್ಲಿ, ಮೇ 3: ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ವಿವಿಪ್ಯಾಟ್‌ನ ರಶೀದಿಗಳನ್ನು ಇವಿಎಂಗಳೊಂದಿಗೆ ಹೋಲಿಸಿ ನೋಡುವ ಪ್ರಮಾಣ ಹೆಚ್ಚಿಸಬೇಕೆಂದು 21 ವಿರೋಧ ಪಕ್ಷಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಪ್ರತೀ ವಿಧಾನಸಭಾ ಕ್ಷೇತ್ರದ 1 ಮತಗಟ್ಟೆಯಲ್ಲಿ ವಿವಿಪ್ಯಾಟ್‌ನ ರಶೀದಿಯಲ್ಲಿ ಇವಿಎಂನೊಂದಿಗೆ ಹೋಲಿಸಿ ನೋಡಲಾಗುತ್ತಿರುವುದಕ್ಕೆ 21 ವಿರೋಧ ಪಕ್ಷಗಳು ಆಕ್ಷೇಪ ಸೂಚಿಸಿದ ಕಾರಣ ಈ ಪ್ರಮಾಣವನ್ನು ಪ್ರತೀ ವಿಧಾನಸಭಾ ಕ್ಷೇತ್ರದ 5 ಮತಗಟ್ಟೆಗೆ ಚುನಾವಣಾ ಆಯೋಗ ಹೆಚ್ಚಿಸಿತ್ತು. ಆದರೆ 5 ಮತಗಟ್ಟೆಗೆ ಹೆಚ್ಚಿಸಿರುವುದು ಸಮಂಜಸವಲ್ಲ. ಇನ್ನಷ್ಟು ಹೆಚ್ಚಿಸಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ವಿಪಕ್ಷಗಳು ಸುಪ್ರೀಂಕೋರ್ಟ್‌ನ ಆದೇಶದ ಮರುಪರಿಶೀಲನೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯನ್ನು ತುರ್ತು ವಿಚಾರಣೆ ಎಂದು ನಮೂದಿಸಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರಿದ್ದ ನ್ಯಾಯಪೀಠಕ್ಕೆ ವಹಿಸಲಾಗಿದೆ. ಮರುಪರಿಶೀಲನಾ ಅರ್ಜಿಯನ್ನು ಮುಂದಿನ ವಾರ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂದು ಅರ್ಜಿದಾರರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News