ಕೋರ್ಟ್ ಸೂಚನೆಗೂ ಮೊದಲೇ ಸರಕಾರ ಎಚ್ಚೆತ್ತುಕೊಳ್ಳಲಿ: ಕೋಟಾ ಶ್ರೀನಿವಾಸ ಪೂಜಾರಿ

Update: 2019-05-04 15:04 GMT

ಬೆಂಗಳೂರು, ಮೇ 4: ಭೀಕರ ಸ್ವರೂಪದ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೈಕೋರ್ಟ್ ನಿರ್ದೇಶನ ನೀಡುವ ಮೊದಲೇ ಎಚ್ಚೆತ್ತುಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸಲಹೆ ಮಾಡಿದ್ದಾರೆ.

ಶನಿವಾರ ವಿಧಾನಸೌಧದ ತನ್ನ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 176 ತಾಲೂಕುಗಳ ಪೈಕಿ 156 ತಾಲೂಕುಗಳಲ್ಲಿ ಬರ ಸ್ಥಿತಿ ಇದೆ. ಆದರೆ, ಮೈತ್ರಿ ಸರಕಾರ ಇದನ್ನ ಗಂಭೀರವಾಗಿ ಪರಿಗಣಿಸಿಲ್ಲ. ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವು ಒದಗಿಸಲು ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು, ಜನರಿಗೆ ಉದ್ಯೋಗ ಕಲ್ಪಿಸುವುದು ಸೇರಿದಂತೆ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು. ಇಲ್ಲವಾದರೆ ರಾಜ್ಯಪಾಲರಿಗೆ ದೂರು ನೀಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಸೇಡಿನ ರಾಜಕಾರಣ ಸಲ್ಲ: ಸರಕಾರ ಸೇಡಿನ ರಾಜಕಾರಣವನ್ನು ಕೈಬಿಡಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದ ಅವರು, ಪತ್ರಕರ್ತರ ಮೇಲೆ ಹೂಡಿರುವ ಮೊಕದ್ದಮೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಹುಚ್ಚುತನ: ಬಿಜೆಪಿಗೆ ಮತ ಹಾಕಿದ ಕಾರಣಕ್ಕೆ ಕರಾವಳಿಗೆ ಎಸೆಸೆಲ್ಸಿ ಫಲಿತಾಂಶದಲ್ಲಿ ಕರಾವಳಿ ಹಿಂದೆ ಬಿದ್ದಿದ್ದು ಹಾಸನ ಪ್ರಥಮ ಸ್ಥಾನ ಗಳಿಸಿದೆ ಎಂಬ ಸಚಿವ ರೇವಣ್ಣನ ಹೇಳಿಕೆ ಹುಚ್ಚುತನದ ಪರಮಾವಧಿ ಎಂದು ಕೋಟಾ ಶ್ರೀನಿವಾಸ ಪೂಜಾರಿ ಇದೇ ವೇಳೆ ಟೀಕಿಸಿದರು.

ರ‍್ಯಾಂಕಿಂಗ್ ರದ್ದು ಮಾಡಿ: ಶಾಲಾ ಮಕ್ಕಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಸರಕಾರದ ತೀರ್ಮಾನ ಸ್ವಾಗತಾರ್ಹ. ಆದರೆ, ಶೈಕ್ಷಣಿಕ ಗುಣಮಟ್ಟದಲ್ಲಿ ಯಾವುದೇ ರಾಜಿ ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಇಂದಿಲ್ಲಿ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅವಧಿಯಲ್ಲೆ ಜಿಲ್ಲಾ ರ‍್ಯಾಂಕಿಂಗ್ ಪದ್ದತಿ ಕೈಬಿಡುವ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಜಿಲ್ಲಾ ರ‍್ಯಾಂಕ್‌ ವಿಚಾರವೇ ರಾಜಕೀಯಕ್ಕೆ ಬಳಕೆ ಆಗುತ್ತಿದೆ. ಜಿಲ್ಲೆ ಶೈಕ್ಷಣಿಕ ಸಾಧನೆಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಅಧಿಕಾರಿಗಳು ಕಾರಣ ಎಂದು ಅವರು ಹೇಳಿದರು.

ಎಂ.ಬಿ.ಪಾಟೀಲ್ ಗೃಹ ಸಚಿವರಾದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧದ ವರದಿ ಅನುಷ್ಟಾನ, ಗೃಹ ಇಲಾಖೆ ಸುಧಾರಣೆ ಸೇರಿದಂತೆ ಇಲಾಖೆ ಅಮೂಲಾಗ್ರ ಬದಲಾವಣೆ ಸಂಬಂಧ ಅವರ ಮೇಲೆ ಬಹಳ ನಿರೀಕ್ಷೆ ಇತ್ತು. ಆದರೆ, ಅವರು ಆ ಕೆಲಸವನ್ನು ಕೈಬಿಟ್ಟು ತಮ್ಮ ವಿರುದ್ಧ ಮಾತನಾಡುವವರ ಧ್ವನಿ ಅಡಗಿಸುವ ಕೆಲಸಕ್ಕೆ ಮುಂದಾಗಿದ್ದಾರೆ

-ಕೋಟಾ ಶ್ರೀನಿವಾಸ ಪೂಜಾರಿ, ಪರಿಷತ್ ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News