ಬೆಳಗಾವಿ: ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ

Update: 2019-05-04 18:08 GMT

ಬೆಳಗಾವಿ, ಮೇ 4: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿ ನಿಗದಿಪಡಿಸಲಾಗುವ ಆರ್ಥಿಕ ಮತ್ತು ಭೌತಿಕ ಗುರಿಯನ್ನು ನೂರಕ್ಕೆ ನೂರರಷ್ಟು ಸಾಧಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪ್ರಸ್ತಾವನೆಗಳನ್ನು ತಕ್ಷಣ ಸಲ್ಲಿಸಿದರೆ ಅನುಮೋದನೆ ನೀಡಲಾಗುವುದು. ಅದೇ ರೀತಿ ಫಲಾನುಭವಿಗಳನ್ನು ಶಾಸಕರು ಆಯ್ಕೆ ಮಾಡುವುದು ಬಾಕಿ ಉಳಿದಿದ್ದರೆ ಕೂಡಲೇ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಅವರು ತಿಳಿಸಿದರು.

ಸಂಘಟನೆಗಳ ಸಭೆಗೆ ನಿರ್ದೇಶನ: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು, ಸಹಾಯ-ಸೌಲಭ್ಯಗಳ ಬಗ್ಗೆ ಆಯಾ ಸಮುದಾಯದ ಜನರಿಗೆ ಸಮರ್ಪಕ ಮಾಹಿತಿ ದೊರಕುತ್ತಿಲ್ಲ. ಆದುದರಿಂದ, ಅಲ್ಪಸಂಖ್ಯಾತ ಸಮುದಾಯಗಳ ಸಂಘಟನೆಗಳ ತಾಲೂಕುವಾರು ಮುಖಂಡರನ್ನು ಕರೆದು ಸಭೆ ನಡೆಸುವ ಮೂಲಕ ಸರಕಾರದ ಯೋಜನೆಗಳ ಬಗ್ಗೆ ಸೂಕ್ತ ಮಾಹಿತಿಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಮುಸಲ್ಮಾನರ ಜನಸಂಖ್ಯೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಕ ಮಾಡುವಾಗ ನಿಯಮಾವಳಿ ಪ್ರಕಾರ ಆಯಾ ಸಮುದಾಯದವರಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ಅಡಿಯಲ್ಲಿ 2018-19ನೆ ಸಾಲಿನಲ್ಲಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದ ಅವರು, ಆಯಾ ಸಮುದಾಯ ಹಾಗೂ ಪ್ರದೇಶದ ಅಗತ್ಯಕ್ಕೆ ಅನುಗುಣವಾಗಿ ಕ್ರಿಯಾಯೋಜನೆ ರೂಪಿಸುವಂತೆ ಸಲಹೆ ನೀಡಿದರು.

ಮಹಾನಗರ ಪಾಲಿಕೆ ವತಿಯಿಂದ ವಾಹನ ಚಾಲನೆ, ಆಟೋಮೊಬೈಲ್, ಮೊಬೈಲ್ ರಿಪೇರಿಗೆ ಸಂಬಂಧಿಸಿದಂತೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು ಅವರು ಹೇಳಿದರು.

ಶಿಕ್ಷಣ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಹಕಾರ, ಆರೋಗ್ಯ, ಮೀನುಗಾರಿಕೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಪ್ರಸಕ್ತ ವರ್ಷ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸುವಂತೆ ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿ.ಪಂ. ಸಿಇಒ ಡಾ.ರಾಜೇಂದ್ರ ಕೆ.ವಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಭವರ್‌ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಪ್ಪಸಾಹೇಬ್ ನರಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News