ರಾಜೀವ್ ಗಾಂಧಿ ಬಗ್ಗೆ ಟೀಕೆ: ಮೋದಿಯ ಸಂಸ್ಕೃತಿಯ ಪ್ರತೀಕ- ಈಶ್ವರ್ ಖಂಡ್ರೆ

Update: 2019-05-05 13:34 GMT

ಬೆಂಗಳೂರು, ಮೇ 5: ‘ರಾಜೀವ್ ಗಾಂಧಿ ನಂ.1 ಭ್ರಷ್ಟರಾಗಿ ಪ್ರಾಣ ಬಿಟ್ಟರು’ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ‘ನಮ್ಮೊಂದಿಗೆ ಇಲ್ಲದವರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ ಅವರ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದು ಟೀಕಿಸಿದ್ದಾರೆ.

ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ಚಿಂಚೋಳಿ ಮತ್ತು ಕುಂದುಗೋಳ ಕ್ಷೇತ್ರಗಳಿಗೆ ಮೇ 19ಕ್ಕೆ ಉಪ ಚುನಾವಣೆ ನಡೆಯಲಿದೆ. ಕುಟುಂಬ ರಾಜಕಾರಣ ಎಂದು ಪಕ್ಷ ತೊರೆದಿದ್ದ ಜಾಧವ್ ಇಂದು ತಮ್ಮ ಪುತ್ರನನ್ನು ಕಣಕ್ಕಿಳಿಸಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆಂದು ದೂರಿದರು.

ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. 2018ರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದ ಅವರು, ನಮ್ಮ ಅಭ್ಯರ್ಥಿಗಳ ಗೆಲುವಿಗೆ ಮುಖಂಡರೆಲ್ಲರೂ ಶ್ರಮಿಸಲಿದ್ದಾರೆ ಎಂದರು.

ಗ್ರಾಮ ಪಂಚಾಯತ್ ವಾರು ಮುಖಂಡರಿಗೆ ಜವಾಬ್ದಾರಿ ನೀಡಲಾಗಿದ್ದು, ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಈ. ತುಕಾರಾಂ, ರಾಜಶೇಖರ ಪಾಟೀಲ್ ಸೇರಿ ಹಲವರಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಖಂಡ್ರೆ ತಿಳಿಸಿದರು.

ಹಿಂದುಳಿದ ವರ್ಗಕ್ಕೆ ಒಂದೇ ಒಂದು ಟಿಕೆಟ್ ಕೊಡಿಸಲು ಆಗದ ಈಶ್ವರಪ್ಪ ಮೊದಲು ತಮ್ಮ ಪಕ್ಷದಲ್ಲಿನ ಪರಿಸ್ಥಿತಿ ಸರಿಪಡಿಸಿಕೊಳ್ಳಲಿ ಎಂದು ಸಲಹೆ ಮಾಡಿದ ಈಶ್ವರ್ ಖಂಡ್ರೆ, ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಹೇಳುವ ನೈತಿಕತೆ ಈಶ್ವರಪ್ಪನವರಿಗೆ ಇಲ್ಲ ಎಂದು ತಿರುಗೇಟು ನೀಡಿದರು.

ತಪ್ಪು ಮಾಡಿದವರಿಗೆ ಶಿಕ್ಷೆ: ತಪ್ಪು ಮಾಡಿದವರಿಗೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ. ಆದರೆ, ಬಿಜೆಪಿಯವರು ಸುಖಾಸುಮ್ಮನೆ ಗೃಹ ಸಚಿವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಕಾನೂನು ಬಿಟ್ಟು ಏನೂ ಮಾಡಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.

‘ಗೋಕಾಕ್ ಕ್ಷೇತ್ರದ ಶಾಸಕ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ. ಅವರೊಂದಿಗೆ ಯಾರೂ ಪಕ್ಷ ತ್ಯಜಿಸುವುದಿಲ್ಲ. ಮೇ 23ಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿರುವುದು ಸುಳ್ಳು. ಅವರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಿದ್ದು, ಪಕ್ಷದಲ್ಲೇ ಇರಲಿದ್ದಾರೆ’

-ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News