×
Ad

‘ನೀಟ್’ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ: ಕೇಂದ್ರ ಸಚಿವ ಜಾವಡೇಕರ್

Update: 2019-05-06 19:39 IST

ಬೆಂಗಳೂರು, ಮೇ 6: ಹಂಪಿ ಎಕ್ಸ್‌ಪ್ರೆಸ್ ರೈಲು ವಿಳಂಬದಿಂದ ‘ನೀಟ್’ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಪ್ರಕಟಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವರು ಮಾಡಿದ ಮನವಿಗೆ ಸ್ಪಂದಿಸಿರುವ ಪ್ರಕಾಶ್ ಜಾವಡೇಕರ್, ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಟ್ವಿಟ್ ಮಾಡಿದ್ದಾರೆ.

ರೈಲು ವಿಳಂಬದಿಂದ ‘ನೀಟ್’ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕೆಂಬ ರಾಜ್ಯ ಸರಕಾರದ ಮನವಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಸೇರಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು.

ಸುಮಾರು 500 ರಷ್ಟು ವಿದ್ಯಾರ್ಥಿಗಳು ಹಂಪಿ ಎಕ್ಸ್‌ಪ್ರೆಸ್ ರೈಲು 6 ಗಂಟೆ ತಡವಾಗಿ ಬಂದಿದ್ದರಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ನೀಟ್ ಪರೀಕ್ಷೆ ಅವಕಾಶ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಕೋರಿ ಕುಮಾರಸ್ವಾಮಿ ಮನವಿ ಮಾಡಿದ್ದರು. 

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ನಾನು ವೈಯಕ್ತಿಕ ಚರ್ಚೆ ನಡೆಸಿದ ಬಳಿಕ ಅವರು ರೈಲು ವಿಳಂಬದಿಂದ ‘ನೀಟ್’ ಪರೀಕ್ಷೆ ಅವಕಾಶ ವಂಚಿತರಿಗೆ ಮರು ಪರೀಕ್ಷೆ ನಡೆಸಲು ಸಮ್ಮತಿಸಿದ್ದು, ಅವರಿಗೆ ನನ್ನ ಧನ್ಯವಾದಗಳು’

-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News