ಸಮ್ಮಿಶ್ರ ಸರಕಾರದ ಸಿಎಂ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ
ಹುಬ್ಬಳ್ಳಿ, ಮೇ 8: ರಾಜ್ಯದಲ್ಲಿ ಮುಖ್ಯಮಂತ್ರಿಯ ಸ್ಥಾನ ಖಾಲಿಯಿಲ್ಲ. ಎಚ್.ಡಿ.ಕುಮಾರಸ್ವಾಮಿಯೇ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಕೆಲವರು ಅಭಿಮಾನದಿಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ? ಊಹಾಪೋಹಗಳಿಗೆಲ್ಲ ಪ್ರತಿಕ್ರಿಯಿಸಲು ಆಗುವುದಿಲ್ಲ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಸುಭದ್ರ, ಜನಪರ, ಭ್ರಷ್ಟಾಚಾರ ರಹಿತ ಸರಕಾರ ನೀಡಲು ಸಾಧ್ಯವಾಗಿಲ್ಲ. ಒಂದೇ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾದರು. ಮುಖ್ಯಮಂತ್ರಿ, ಸಚಿವರು ಜೈಲಿಗೆ ಹೋಗಿ ಬಂದರು. ಇವರಿಗೆಲ್ಲ ಜನ ಮತ್ತೆ ಅಧಿಕಾರ ನೀಡಬೇಕೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ. ಜನರು ಯಾವುದೇ ಕಾರಣಕ್ಕೂ ಬಿಜೆಪಿಗೆ ಅಧಿಕಾರ ಕೊಡುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿಯನ್ನು ಸಂಪುಟದಿಂದ ಕೈ ಬಿಟ್ಟಿದ್ದು ಸರಿಯಲ್ಲ ಎಂದು ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷದ ತೀರ್ಮಾನಗಳನ್ನು ನಮ್ಮ ವರಿಷ್ಠರು ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ಬಸವರಾಜ ಹೊರಟ್ಟಿ ಮಾತನಾಡುವ ಅಗತ್ಯವಿಲ್ಲ ಎಂದರು.
ಸ್ಥಾನ ಖಾಲಿ ಇಲ್ಲ
ಕೆಲ ಶಾಸಕರು ನನ್ನ ಮೇಲಿನ ಅಭಿಮಾನದಿಂದ ಮುಖ್ಯಮಂತ್ರಿ ಆಗಲಿ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು. ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಅದು ಬದಲಾವಣೆಯಾಗುವ ಯಾವುದೆ ಸೂಚನೆಗಳೂ ಇಲ್ಲ.
-ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ
ಮತ್ತೆ ಸಿಎಂ ಆದರೆ ಅತೀವ ಸಂತೋಷ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನಪರ ಕೆಲಸಗಳನ್ನು ಮಾಡುವ ಮೂಲಕ ಜನರಿಗೆ ಹತ್ತಿರವಾಗಿದ್ದಾರೆ. ಇಂತಹ ಧೀಮಂತ ವ್ಯಕ್ತಿ ಮತ್ತೊಮ್ಮೆ ಮುಖ್ಯಮಂತ್ರಿಯಾದರೆ ನನಗೆ ಅತೀವ ಸಂತೋಷವಾಗುತ್ತದೆ. ನನ್ನ ಆಶೀರ್ವಾದ ಅವರಿಗೆ ಯಾವಾಗಲು ಇರುತ್ತದೆ.
-ನಿರಂಜನಾನಂದಪುರಿ ಸ್ವಾಮೀಜಿ, ಪೀಠಾಧ್ಯಕ್ಷ, ಕಾಗಿನೆಲೆಮಹಾ ಸಂಸ್ಥಾನ