ಬಾಲ್ಯ ವಿವಾಹ ಪಿಡುಗು ನಿರ್ಮೂಲನೆ: ಹಾಡಿಗಳಲ್ಲಿ ಜಾಗೃತಿ ಮೂಡಿಸಲು ಕೊಡಗು ಜಿಲ್ಲಾಧಿಕಾರಿ ಸೂಚನೆ

Update: 2019-05-08 17:05 GMT

ಮಡಿಕೇರಿ, ಮೇ 8 : ಬಾಲ್ಯ ವಿವಾಹ ಪಿಡುಗು ತಡೆಯುವಲ್ಲಿ ಜಿಲ್ಲೆಯ ಎಲ್ಲಾ ಗಿರಿಜನ ಹಾಡಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ.    

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ತಡೆಯುವಲ್ಲಿ ನಿರ್ವಹಿಸಬೇಕಾದ ಕ್ರಮಗಳ ಬಗ್ಗೆ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸಬೇಕು. ಅಂಗನವಾಡಿ ಮೇಲ್ವಿಚಾರಕರು ಮತ್ತು ಆಶಾ ಕಾರ್ಯಕರ್ತರು ಬಾಲ್ಯ ವಿವಾಹ ತಡೆಯುವ ಬಗ್ಗೆ ಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು. 

ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲು ಮಾಡುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

ಈ ಬಗ್ಗೆ ಮಾತನಾಡಿದ ವಕೀಲರಾದ ಮೀನಾಕುಮಾರಿ ಅವರು ಎಫ್‍ಐಆರ್ ದಾಖಲಿಸಿದ್ದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡಬೇಕಿದೆ. ಇದರಿಂದಾಗಿ ಯಾರೂ ಸಹ ಎಫ್‍ಐಆರ್ ದಾಖಲಿಸಲು ಮುಂದೆ ಬರುತ್ತಿಲ್ಲ ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

ಬಾಲ್ಯ ವಿವಾಹ ತಡೆಯುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಸಮುದಾಯದ ಪ್ರತಿನಿಧಿಗಳ ವಿಶ್ವಾಸ ಪಡೆದು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಹಾಡಿಯ ಮಕ್ಕಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಜಾಗೃತಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಹಾಡಿಯ ಮಕ್ಕಳು 5ನೇ ತರಗತಿಯಿಂದಲೇ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.   

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ ಅವರು ಈ ವರ್ಷ ಎರಡು ಬಾಲ್ಯ ವಿವಾಹ ಪ್ರಕರಣ ವರದಿಯಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಅವರು ಬಾಲ್ಯ ವಿವಾಹ ತಡೆಯುವಲ್ಲಿ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು. ಆರು ತಿಂಗಳಿಗಿಂತಲೂ ಹೆಚ್ಚು ಕಾಲ ಇರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. 

ಈ ಬಗ್ಗೆ ಮಾಹಿತಿ ನೀಡಿದ ಅರುಂಧತಿ ಅವರು 2018-19 ನೇ ಸಾಲಿನಲ್ಲಿ 174 ಪ್ರಕರಣಗಳು ದಾಖಲಾಗಿದ್ದು, 84 ಪ್ರಕರಣಗಳು ಇತ್ಯರ್ಥಗೊಂಡಿದ್ದು, 90 ಪ್ರಕರಣಗಳು ಬಾಕಿ ಇವೆ, 13 ಪ್ರಕರಣಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.  

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆ ನಿಟ್ಟಿನಲ್ಲಿ ಅರ್ಹರಿಗೆ ಆಧಾರ್ ಕಾರ್ಡ್ ಕೊಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಅಂಗನವಾಡಿಗಳಿಗೆ ಎಂಎಸ್‍ಪಿಟಿಸಿಯಿಂದ ವಿತರಿಸಲಾಗುತ್ತಿರುವ ಆಹಾರ ಗುಣಮಟ್ಟದಿಂದ ಕೂಡಿರಬೇಕು. ಸಕಾಲದಲ್ಲಿ ಆಹಾರ ಪೂರೈಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಮಾತೃಪೂರ್ಣ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು, ಅರ್ಹರಿಗೆ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ವಿತರಿಸುವಂತೆ ಅವರು ಹೇಳಿದರು. 

ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕೌಟುಂಬಿಕ ದೌರ್ಜನ್ಯ ಆಗದಂತೆ ಜಾಗೃತಿ ಮೂಡಿಸಬೇಕು. ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಗಮನಹರಿಸುವಂತೆ ಅವರು ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಸಿಡಿಪಿಒ ಸೀತಾಲಕ್ಷ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆಯ ಆರ್‍ಸಿಎಚ್ ಅಧಿಕಾರಿ ಡಾ.ಆನಂದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ಪೌರಾಯುಕ್ತರಾದ ಎಂ.ಎಲ್.ರಮೇಶ್ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News