ಕುಡಿಯುವ ನೀರು-ಮೇವಿಗೆ ಸಮಸ್ಯೆಯಿಲ್ಲ: ಆರ್.ವಿ.ದೇಶಪಾಂಡೆ

Update: 2019-05-09 12:56 GMT

ಬೆಂಗಳೂರು, ಮೇ 9: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಮುಖ್ಯಮಂತ್ರಿ ಎರಡು ಬಾರಿ ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓಗಳ ಸಭೆ ಮಾಡಿದ್ದಾರೆ. ಕುಡಿಯುವ ನೀರು-ಜಾನುವಾರುಗಳಿಗೆ ಎಲ್ಲಿಯೂ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಯಾವ ಆಧಾರದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದರು.

ನಾವು ಎಲ್ಲ ಕಡೆ ಪ್ರವಾಸಿ ಮಾಡಿ ಪರಿಸ್ಥಿತಿ ಅವಲೋಕಿಸಿದ್ದೇವೆ. ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ತಲಾ 10 ಕೋಟಿ ರೂ.ಹಣವಿದೆ. ಕೆಲವು ಕಡೆ ಸಮಸ್ಯೆಗಳಿವೆ. ನಾವು ಎಲ್ಲವನ್ನು ಪರಿಹರಿಸಲು ಪ್ರಯತ್ನ ಮಾಡುತ್ತಿದ್ದೇವೆ. ಕುಡಿಯುವ ನೀರಿನ ಅಭಾವ ಎಲ್ಲಾದರೂ ಕಂಡು ಬಂದರೆ ತ್ವರಿತಗತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಕೆಲವು ಶಾಸಕರು ಆಗ್ರಹಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೇಶಪಾಂಡೆ, ಮೈತ್ರಿ ಸರಕಾರದ ನೇತೃತ್ವವನ್ನು ಕುಮಾರಸ್ವಾಮಿ ವಹಿಸಿಕೊಂಡಿದ್ದಾರೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದರು.

ಕುಮಾರಸ್ವಾಮಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂಬ ತೀರ್ಮಾನವನ್ನು ಎರಡು ಪಕ್ಷಗಳ ಮುಖಂಡರು ಸೇರಿ ತೆಗೆದುಕೊಂಡಿರುವುದು. ಇಂತಹ ಪರಿಸ್ಥಿತಿ ಈ ರೀತಿಯ ಹೇಳಿಕೆಗಳನ್ನು ನೀಡುವುದರಿಂದ ವಾತಾವರಣ ಕೆಡುತ್ತದೆ ಎಂದು ದೇಶಪಾಂಡೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News