ರಾಜ್ಯ ಸರಕಾರದಿಂದ ಆಂಗ್ಲ ಮಾಧ್ಯಮ ಶಾಲೆ: ಎಸ್‌ಡಿಪಿಐ ಸ್ವಾಗತ

Update: 2019-05-09 17:15 GMT

ಬೆಂಗಳೂರು, ಮೇ 9: ರಾಜ್ಯ ಸರಕಾರದ ವತಿಯಿಂದಲೇ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವ ಯೋಜನೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿರುವುದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಪಕ್ಷ ಸ್ವಾಗತಿಸಿದೆ.

ರಾಜ್ಯದ ಪ್ರತಿ ತಾಲೂಕಿಗೆ ಎರಡು ಶಾಲೆಗಳಂತೆ ರಾಜ್ಯಾದ್ಯಂತ ಒಂದು ಸಾವಿರ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು ಮೇ 13 ರಂದು ಚಾಲನೆ ನೀಡಲಾಗುವ ಈ ಯೋಜನೆಯನ್ನು ಸ್ವಾಗತಿಸುವುದಾಗಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದ್ದಾರೆ.

ಕಳೆದ ದಶಕಗಳಿಂದ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುತ್ತಿವೆ. ಪೋಷಕರು ಹೆಚ್ಚಾಗಿ ಆಂಗ್ಲ ಮಾಧ್ಯಮ ಶಾಲೆಗಳನ್ನೆ ಆಯ್ಕೆ ಮಾಡುತ್ತಿದ್ದಾರೆ. ಈ ಹಾವಳಿಗೆ ತಡೆಗಟ್ಟಲು ಸರಕಾರದಿಂದ ಆಂಗ್ಲ ಮಾಧ್ಯಮ ಶಾಲೆ ತೆರೆಯುವ ನಿರ್ಧಾರ ಒಳ್ಳೆಯದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಶ್ರೀಮಂತ ವರ್ಗದ ಮಕ್ಕಳಿಗೆ ಮಾತ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಂದ ಇನ್ನು ಮುಂದೆ ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಈ ಯೋಜನೆ ನೆರವಾಗಬಹುದೆಂದು ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದ್ದಾರೆ.

ಈ ಶಾಲೆಗಳನ್ನು ಶೈಕ್ಷಣಿಕವಾಗಿ ತೀರಾ ಹಿಂದುಳಿದ ಮುಸ್ಲಿಮ್, ದಲಿತ ಮತ್ತು ಬಡ ವರ್ಗದವರು ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ತೆರೆಯಬೇಕೆಂದು ನಮ್ಮ ವಿನಂತಿ. ಕೆಲವು ಕಡೆ ಉರ್ದು ಭಾಷೆಯನ್ನು ಎರಡನೆ ಭಾಷೆಯಾಗಿ ಕಲಿಸಬೇಕು. ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸರಕಾರಿ ಕನ್ನಡ ಶಾಲೆಗಳಿಗೆ ಯಾವುದೇ ತೊಂದರೆಯಾಗಬಾರದು. ಸೀಟುಗಳಲ್ಲಿ ತೀರಾ ಹಿಂದುಳಿದ ಅಹಿಂದ ವರ್ಗದವರಿಗೆ ಮೀಸಲಾತಿ ನೀಡಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕನಸಿನ ಯೋಜನೆ ತಳಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳಲಿ ಎಂದು ಇಲ್ಯಾಸ್ ಮುಹಮ್ಮದ್ ತುಂಬೆ ಪತ್ರಿಕಾ ಹೇಳಿಕೆಯಲ್ಲಿ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News