ಸಿಎಂ ರೆಸಾರ್ಟ್ ವಾಸ್ತವ್ಯಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಾಗಿಲ್ಲ: ಸಚಿವ ಸಿ.ಎಸ್.ಪುಟ್ಟರಾಜು

Update: 2019-05-11 16:00 GMT

ಮಡಿಕೇರಿ, ಮೇ 11: ಯಡಿಯೂರಪ್ಪ ತನ್ನ ಹಾಗೂ ತನ್ನ ಮಗನ ಪರಿಸ್ಥಿತಿಯನ್ನು ಮೊದಲು ನೋಡಿಕೊಳ್ಳಲಿ. ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ನೋಡುವ ಬದಲು ಬೇರೆಯವರ ತಟ್ಟೆಯ ಬಗ್ಗೆ ಅವರಿಗೇಕೆ ಚಿಂತೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಅವರು ಕಿಡಿಕಾರಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಕಳೆದ ಒಂದು ವರ್ಷದಿಂದ ಮೈತ್ರಿ ಸರಕಾರ ಉರುಳುವ ಬಗ್ಗೆಯೇ ಮಾತನಾಡುತ್ತಿದ್ದಾರೆ. ಆದರೆ ಅವರ ಮಾತಿಗೆ ಕವಡೆ ಕಾಸಿನ ಬೆಲೆಯೂ ಇಲ್ಲ ಎಂದು ಹೇಳಿದರಲ್ಲದೆ, ರಾಜ್ಯದ ಮೈತ್ರಿ ಸರಕಾರ ಸುಭದ್ರವಾಗಿದೆ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದರು.

ರಾಜ್ಯ ರಾಜಕಾರಣದಲ್ಲಿ ಯಾವುದೇ ಪ್ರಮುಖ ಬೆಳೆವಣಿಗೆಯಾಗಿಲ್ಲ. ಮುಖ್ಯಮಂತ್ರಿ ಅವರ ರೆಸಾರ್ಟ್ ವಾಸ್ತವ್ಯಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಾಗಿಯೂ ಇಲ್ಲ. ಕಳೆದ ಒಂದೂವರೆ ತಿಂಗಳಿನಿಂದ ಮುಖ್ಯಮಂತ್ರಿಗಳು ಸತತವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ಇತ್ತೀಚೆಗೆ ಉಡುಪಿಯಲ್ಲಿ ಆಯುರ್ವೇದ ಚಿಕಿತ್ಸೆ ಪಡೆದ್ದು, ನಾಳೆ ಮಂಡ್ಯದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾಗಬೇಕಿದೆ. ಶನಿವಾರವೂ ಒಂದೆರಡು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಬೇಕಿತ್ತಾದರೂ, ಅಲ್ಲಿ ವಾಸ್ತವ್ಯ ಹೂಡುವುದರಿಂದ ಸಮಸ್ಯೆಯಾಗಬಹುದೆಂಬ ಕಾರಣದಿಂದ ಅವರು ಇಲ್ಲಿಗೆ ಆಗಮಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ದೇವಾಲಯಗಳಿಗೆ ನಿರಂತರ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು ಅವರು, ನಾಡಿನ ದೊರೆಯಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಯ ಬಾಳು ಹಸನಾಗಲಿ, ಉತ್ತಮ ಮಳೆಯಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುವುದರಲ್ಲಿ ತಪ್ಪಿದೆಯೇ ಎಂದ ಅವರು, ನೀವು ಯಾರೂ ದೇವಾಲಯಗಳಿಗೆ ಹೋಗುವುದಿಲ್ಲವೇ ಎಂದು ಮರು ಪ್ರಶ್ನಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News