ಬಿಜೆಪಿ ಕುದುರೆ ವ್ಯಾಪಾರಕ್ಕೆ ಜನತೆ ಪಾಠ ಕಲಿಸಲಿದ್ದಾರೆ: ಕೆ.ಸಿ.ವೇಣುಗೋಪಾಲ್

Update: 2019-05-12 15:04 GMT

ಹುಬ್ಬಳ್ಳಿ, ಮೇ 12: ‘ಇಪ್ಪತ್ತು ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆಂದು ಬಿಎಸ್‌ವೈ ಹೇಳಿದ್ದಾರೆ. ಅತ್ತ ಮೋದಿ ಬಂಗಾಳದ 40 ಮಂದಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂದು ಹೇಳಿಕೆ ನೀಡಿದ್ದು, ಬಿಜೆಪಿ ಕುದುರೆ ವ್ಯಾಪಾರಕ್ಕೆ ಇಳಿದಿದೆ. ಇದಕ್ಕೆ ಜನತೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ಉಪ ಚುನಾವಣೆ ನಡೆಯಲಿರುವ ಕುಂದಗೋಳ ಕ್ಷೇತ್ರದ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇಂದ್ರದ ಎನ್‌ಡಿಎ ಸರಕಾರದ ವಿರುದ್ಧ ದೇಶದ ಜನರಿಗೆ ಅಸಮಾಧಾನವಿದ್ದು, ಮೇ 23ರ ಚುನಾವಣೆ ಫಲಿತಾಂಶ ಬಂದ ಬಳಿಕ ಇದು ಅವರಿಗೆ ಗೊತ್ತಾಗಲಿದೆ ಎಂದು ಹೇಳಿದರು.

ಸಣ್ಣ-ಪುಟ್ಟ ಹೇಳಿಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕೆಲ ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲೀ ಎನ್ನುತ್ತಾರೆ. ಇದಕ್ಕೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಮೈತ್ರಿ ಸರಕಾರ ಇನ್ನೂ 4 ವರ್ಷ ಸುಭದ್ರವಾಗಿರಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದಲ್ಲೀಗ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಕಲಬುರಗಿಯ ಚಿಂಚೋಳಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಹೆಚ್ಚಿನ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News