ಬೆಂಗಳೂರಿನ ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಸಂಚಾರಿ ಪೊಲೀಸರಿಂದ ಹೊಸ ಪ್ರಯೋಗ

Update: 2019-05-13 16:50 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 13: ನಗರದ ಪಾರ್ಕಿಂಗ್ ಸಮಸ್ಯೆ ಸಂಚಾರ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದು, ಈ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಸಂಚಾರ ಪೊಲೀಸರು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ನಗರದ 44 ಸಂಚಾರ ಪೊಲೀಸ್ ಠಾಣಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿರುವ ಸರಕಾರಿ ಜಮೀನುಗಳನ್ನು ಗುರುತಿಸಿ, ಕೇಂದ್ರ ಸಂಚಾರ ವಿಭಾಗಕ್ಕೆ ಮಾಹಿತಿ ರವಾನಿಸುವಂತೆ ಲಿಖಿತ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಪಾರ್ಕಿಂಗ್ ಸ್ಥಳಗಳನ್ನು ಹೆಚ್ಚುವರಿಯಾಗಿ ಗುರುತಿಸಿ ಸಮಸ್ಯೆಗೆ ಕಡಿವಾಣ ಹಾಕಲು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಮುಂದಡಿ ಇಟ್ಟಿದ್ದಾರೆ.

ಸೂಕ್ತ ಸಮಯದಲ್ಲಿ ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ವೈಜ್ಞಾನಿಕವಾಗಿ ಕ್ರಮಕೈಗೊಳ್ಳದಿದ್ದರೆ, ಭವಿಷ್ಯದಲ್ಲಿ ಪಾರ್ಕಿಂಗ್ ವಾರ್ ಆಗುತ್ತದೆ. ಹೀಗಾಗಿ ನಗರದಲ್ಲಿರುವ ಸರಕಾರಿ ಜಮೀನುಗಳ ಪತ್ತೆ ಕಾರ್ಯಕ್ಕೆ ಸಂಚಾರ ಠಾಣಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಸಂಪೂರ್ಣ ಮಾಹಿತಿಯನ್ನು ಸರಕಾರಕ್ಕೆ ಅವರು ನೀಡಿದ್ದಾರೆ. ಅಲ್ಲದೆ, ನಗರ ವ್ಯಾಪ್ತಿಯಲ್ಲಿ ವಾಹನಗಳ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ವಿವಿಧ ಪೌರಸಂಸ್ಥೆಗಳೊಂದಿಗೆ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಹಿಂದಿನ ಸಭೆಗಳಲ್ಲಿ, ನಗರ ವ್ಯಾಪ್ತಿಯಲ್ಲಿ ವಾಹನಗಳಿಗೆ ಸುರಕ್ಷಿತ ನಿಲುಗಡೆ ವ್ಯವಸ್ಥೆಯನ್ನು ಕಲ್ಪಿಸುವುದು ಹಾಗೂ ಈ ಸಂಬಂಧ ನಗರ ವ್ಯಾಪ್ತಿಯಲ್ಲಿ ವಾಹನಗಳ ನಿಲುಗಡೆಗಾಗಿ ಖಾಲಿ ಇರುವ ಜಾಗಗಳನ್ನು ಗುರುತಿಸುವುದು ಸಹ ಚರ್ಚೆಯಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ, ತಮ್ಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳ ನಿಲುಗಡೆಗೆ ಲಭ್ಯವಿರುವ ಸರಕಾರಿ ಜಮೀನುಗಳನ್ನು ಗುರುತಿಸಿ, ಅವುಗಳ ಮಾಹಿತಿಗಳನ್ನು ಎ.30ರೊಳಗೆ ಕೇಂದ್ರ ಕಚೇರಿಗೆ ಕಳುಹಿಸಲು ಸೂಚಿಸಲಾಗಿದೆ.

50ರಿಂದ 100 ಜಾಗ ಗೊತ್ತಾಗಿದೆ: ಈ ಸಂಬಂಧ ಕಳೆದ ಒಂದು ತಿಂಗಳಿಂದ ನಗರದ ವಿವಿಧ ಸಂಚಾರ ಠಾಣಾ ವ್ಯಾಪ್ತಿಯಲ್ಲಿರುವ ಸುಮಾರು 50ರಿಂದ 100 ಸರಕಾರಿ ಜಮೀನುಗಳ ವಿವರ ಸಿಕ್ಕಿದೆ. ಈ ಪ್ರಕ್ರಿಯೆ ಮುಂದುವರಿಯಲಿದ್ದು, ಸಂಪೂರ್ಣ ಮಾಹಿತಿ ಸಂಗ್ರಹಿಸಿದ ಬಳಿಕ ಸರಕಾರ, ಬಿಬಿಎಂಪಿ ಹಾಗೂ ಸಂಬಂಧಿಸಿದ ಇಲಾಖೆಗೆ ರವಾನಿಸಿ, ಪಾರ್ಕಿಂಗ್ ವ್ಯವಸ್ಥೆ ಕಲಿಸುವಂತೆ ಮನವಿ ಮಾಡಲಾಗುವುದು ಎಂದು ಪಿ.ಹರಿಶೇಖರನ್ ಹೇಳಿದರು.

ಅನಧಿಕೃತ ಪಾರ್ಕಿಂಗ್: ಸಾರ್ವಜನಿಕರಿಗೆ ಅಗತ್ಯವಿರುವ ಕಡೆಗಳಲ್ಲಿ ವೈಜ್ಞಾನಿಕವಾಗಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಲ್ಲಿ ಸ್ಥಳೀಯ ಸಂಸ್ಥೆಗಳು ವಿಫಲವಾಗಿವೆ. ಇದನ್ನೆ ಬಂಡವಾಳವಾಗಿಸಿಕೊಂಡಿರುವ ಕೆಲ ಖಾಸಗಿಯವರು ಅನಧಿಕೃತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಸರಕಾರಕ್ಕೆ ಬರಬೇಕಾದ ಆದಾಯವನ್ನು ತಮ್ಮ ಜೇಬಿಗಿಳಿಸಿ ಕೊಳ್ಳುತ್ತಿದ್ದಾರೆ. ಅವರೊಂದಿಗೆ ಪಾಲಿಕೆಯ ಕೆಲ ಅಧಿಕಾರಿಗಳು ಕೈಜೋಡಿಸಿದ್ದಾರೆ ಎಂಬ ಆರೋಪಗಳು ನಿರಂತರವಾಗಿ ಕೇಳಿಬರುತ್ತಿದ್ದರೂ ನಗರದಲ್ಲಿನ ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲು ಪಾಲಿಕೆ ಸಂಪೂರ್ಣವಾಗಿ ವಿಫಲವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News