ಜಿಲ್ಲಾಧಿಕಾರಿ ಪ್ರತಿದಿನ ಬರಪೀಡಿತ ಗ್ರಾಮಗಳಿಗೆ ಭೇಟಿ ಕಡ್ಡಾಯ: ಸಿಎಂ ಕುಮಾರಸ್ವಾಮಿ

Update: 2019-05-15 12:22 GMT

ಬೆಂಗಳೂರು, ಮೇ 15: ಕುಡಿಯುವ ನೀರು ಸರಬರಾಜು ಹಾಗೂ ನಾನುವಾರುಗಳಿಗೆ ಮೇವು ಸರಬರಾಜನ್ನು ಖಾತರಿ ಪಡಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಪ್ರತಿ ದಿನ ಗ್ರಾಮಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಎಚ್‌ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿ ಕೃಷ್ಣಾದಲ್ಲಿ ರಾಜ್ಯದಲ್ಲಿ ತಲೆದೂರಿರುವ ಬರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಕಾರ್ಯಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಸಮಸ್ಯೆ ಇರುವ ಗ್ರಾಮಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು ಮತ್ತು ಮೇವಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ತಿಳಿಸಿದರು.

ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್‌ಗಳಿಗೆ ಎಪ್ರಿಲ್ ತಿಂಗಳ ವರೆಗಿನ ಬಾಕಿ ಬಿಲ್ ಪಾವತಿಯನ್ನು ವಾರದೊಳಗೆ ಪೂರ್ಣಗೊಳಿಸಬೇಕು. 15 ದಿನಗಳಿಗೊಮ್ಮೆ ಬಿಲ್ ಪಾವತಿಸುವಂತೆ ಸೂಚಿಸಿ, ಅವಧಿ ಮುಗಿದ ನಂತರ ಬಿಲ್ ಸಲ್ಲಿಸಿದರೆ ಆಯಾ ಪಿಡಿಒ, ಇಓಗಳೇ ಹೊಣೆಗಾರರು. ಅವರ ವಿರುದ್ಧ ಕ್ರಮ ಕೈಗೊಳುವಂತೆ ಅರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಕೆ ಕಾರ್ಯವನ್ನು ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಳಿಸಲಾಗಿಲ್ಲ. ಕೂಡಲೇ ಜಿಪಿಎಸ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದ ಮುಖ್ಯಮಂತ್ರಿ, ಹಣ ಸೋರಿಕೆಯಾಗುವುದನ್ನು ಅಧಿಕಾರಿಗಳು ತಡೆಗಟ್ಟಬೇಕು. ಈ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬಾಡಿಗೆ ಆಧಾರದ ಮೇಲೆ ಕೊಳವೆ ಬಾವಿಗಳು: ರಾಜ್ಯದಲ್ಲಿ ಒಟ್ಟು 1,873 ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲಾಗಿದ್ದು, ಇನ್ನೂ ಹೆಚ್ಚಿನ ಶ್ರಮವಹಿಸಿ ನೀರು ಹೆಚ್ಚಿರುವ ಕೊಳವೆಬಾವಿಗಳನ್ನು ಬಾಡಿಗೆ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಅಂತರ್ಜಲ ಸಾರ್ವಜನಿಕರ ಸ್ವತ್ತು. ಹೀಗಾಗಿ ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿಗಳನ್ನು ವಶಕ್ಕೆ ಪಡೆಯಲು ಸಹ ಅಧಿಕಾರಿಗಳು ಹಿಂಜರಿಯಬಾರದು ಎಂದು ಅವರು ಹೇಳಿದರು.

ಸಹಾಯವಾಣಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಎಲ್ಲಾ ಜಿಲ್ಲೆಗಳಲ್ಲಿ ದಿನಪೂರ್ತಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಇವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಬೇಕು. ಪ್ರತಿ ವ್ಯಕ್ತಿಗೆ ಕನಿಷ್ಠ 40 ಎಲ್ಪಿಸಿಡಿ ನೀರು ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಬೇಕೆಂದು ಅವರು ಹೇಳಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಚಿವ ಕೃಷ್ಣಭೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದಲ್ಲಿ 1,29,08,292 ಜಾನುವಾರುಗಳಿವೆ. ಇವುಗಳಿಗೆ 62,48,640 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇದು ಮುಂದಿನ 12 ವಾರಗಳಿಗೆ ಸಾಕಾಗುತ್ತದೆ. ಪ್ರಸ್ತುತ 165 ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದ್ದು, ಸದರಿ ಮೇವು ಬ್ಯಾಂಕ್‌ಗಳಲ್ಲಿ ಪ್ರತಿ ಕೆ.ಜಿಗೆ 2ರೂ. ರಂತೆ ಮೇವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. 16 ಗೋಶಾಲೆಗಳನ್ನು ತೆರೆಯಲಾಗಿದ್ದು, ಇದರಲ್ಲಿ 14,054 ಜಾನುವಾರುಗಳನ್ನು ಸಂರಕ್ಷಿಸಲಾಗಿದೆ. ಅಗತ್ಯತೆಯನುಸಾರ ಗೋಶಾಲೆ ಹಾಗೂ ಮೇವಿನ ಬ್ಯಾಂಕ್‌ಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಹಸಿರು ಮೇವು ಬೆಳೆಯಲು 42.7ರೂ. ಕೋಟಿಗಳ ವೆಚ್ಚದಲ್ಲಿ 16.80 ಲಕ್ಷ ಮಿನಿಕಿಟ್ಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗಿದೆ. ಇದರಿಂದಾಗಿ 63.00 ಲಕ್ಷ ಮೆಟ್ರಿಕ್ ಟನ್ ಹಸಿರು ಮೇವು ಇಲ್ಲಿಯವರೆಗೆ ಉತ್ಪಾದನೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News