ಆಪರೇಷನ್ ಕಮಲ ಯಶಸ್ವಿಯಾಗಲ್ಲ: ಮಲ್ಲಿಕಾರ್ಜುನ ಖರ್ಗೆ

Update: 2019-05-15 16:38 GMT

ಹುಬ್ಬಳ್ಳಿ, ಮೇ 15: ರಾಜ್ಯದಲ್ಲಿ ಬಿಜೆಪಿಯವರು ಎಷ್ಟೇ ಪ್ರಯತ್ನಗಳನ್ನು ಮಾಡಿದರೂ, ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಸುಭದ್ರವಾಗಿದ್ದು, ಬಿಜೆಪಿ ಎಷ್ಟೇ ತಿಪ್ಪರಲಾಗ ಹಾಕಿದರೂ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಬಿಜೆಪಿಯವರು ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರೆ, ಸರಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕೂಡ ಆಪರೇಷನ್ ಮಾಡಲಿದೆ. ಬಿಜೆಪಿಯ ಹಲವು ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿಯೂ ಇದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದರು.

ಮೈತ್ರಿ ಸರಕಾರದ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಐದು ವರ್ಷ ಮುಂದುವರೆಯುತ್ತಾರೆ. ಮೈತ್ರಿ ಸರಕಾರದ ಅಸ್ತಿತ್ವದ ಬಗ್ಗೆ ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಸರಕಾರದ ರಕ್ಷಣೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ದಿನೇಶ್ ಗುಂಡೂರಾವ್ ಆಪರೇಷನ್ ಮಾಡುತ್ತಾರೆ ಎಂದು ಅವರು ಹೇಳಿದರು.

ನಾನು ಮುಖ್ಯಮಂತ್ರಿಯಾಗಬೇಕು ಎಂದು ಬಹಿರಂಗವಾಗಿ ಹೇಳುವುದಿಲ್ಲ. ಮುಖ್ಯಮಂತ್ರಿ ಮಾಡುವುದು ಹೈಕಮಾಂಡ್. ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ನಾನು ಮುಖ್ಯಮಂತ್ರಿಯಾಗಬೇಕು ಎಂದು ಯಾರೆಲ್ಲ ಹೇಳುತ್ತಾರೋ ನೋಡೋಣ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಕೇಂದ್ರದಲ್ಲಿ ಈ ಬಾರಿ ಯುಪಿಎ ಸರಕಾರ ಅಸ್ತಿತ್ವಕ್ಕೆ ಬರುತ್ತದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಅನ್ನೋದು ನನ್ನ ಇಚ್ಛೆಯಾಗಿದೆ. ವಿರೋಧ ಪಕ್ಷಗಳಿಗೆ ಹಾಗೂ ಇತರ ಪಕ್ಷಗಳಿಗೆ ಆ ಆಸೆ ಇರದೇ ಇರಬಹುದು ಎಂದ ಅವರು, ಬೇರೆ ಯಾರಾದರೂ ಪ್ರಧಾನಿ ಆಗುವ ವಿಚಾರದ ರಾಹುಲ್ ಗಾಂಧಿ ತೀರ್ಮಾನಿಸುತ್ತಾರೆ ಎಂದರು.

ಉಪ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಕೆಣಕಿ ಮಾತನಾಡಿದ್ದು ದುರ್ದೈವ. ಅಲ್ಲದೇ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಈಗ ಚರ್ಚಿಸುವುದು ಅಪ್ರಸ್ತುತ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News