"ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಚು.ಆಯೋಗಕ್ಕೆ ದೂರು"

Update: 2019-05-16 14:05 GMT

ಬೆಂಗಳೂರು, ಮೇ 16: ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆಯ ಪ್ರಚಾರದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಕೆಲ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಿದ್ದೇವೆಂದು ವಿಧಾನಪರಿಷತ್ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.

ಗುರುವಾರ ಕೆಪಿಸಿಸಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಧರ್ಮದವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವುದು ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ. ಇವರನ್ನು ಚುನಾವಣಾ ಪ್ರಚಾರದಿಂದ ದೂರವಿಡಬೇಕೆಂದು ಒತ್ತಾಯಿಸಿದರು.

ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಇತರೆ ನಾಯಕರು ಸಂಸ್ಕೃತಿ ಹೀನ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆಯ ಹಿಂದೆ ಪ್ರಧಾನಿ ನರೇದ್ರ ಮೋದಿ ಹಾಗೂ ಅಮಿತ್ ಶಾ ಅವರ ಕುಮಕ್ಕು ಇದೆ ಎಂದು ಅವರು ಆಪಾದಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಬ್ರೋಕರ್ ಎಂದು ಬಿಜೆಪಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು ಖಂಡನೀಯ. ಬಿಜೆಪಿಯಿಂದ ಹೊರ ದೂಡಲ್ಪಟ್ಟಿದ್ದ ಇವರು ಯಡಿಯೂರಪ್ಪ ಕೈ ಕಾಲು ಹಿಡಿದು ಪುನಃ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರು ಬಿಜೆಪಿಗೆ ಮತ ಹಾಕುವುದೆ ಬೇಡವೆಂದು ಹೇಳಿದ್ದರು. ಇಂತಹವರಿಂದ ಸಮಾಜ ಏನನ್ನು ನಿರೀಕ್ಷಿಸಲು ಸಾಧ್ಯವೆಂದು ಅವರು ಹೇಳಿದರು.

ಮೋದಿಗೆ ಬಳೆ ಕಳುಹಿಸಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಳೆ ತೊಡಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಸ್ಮತಿ ಇರಾನಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹೆಚ್ಚಾಗಿದೆ ಎಂದು ಆರೋಪಿಸಿ ಮನಮೋಹನ್ ಸಿಂಗ್‌ಗೆ ಬಳೆ ತೊಡಿಸಬೇಕೆಂದು ಹೇಳಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಈ ಹಿಂದಿಗಿಂತಲೂ ಎಲ್ಲ ವಸ್ತುಗಳ ಬೆಲೆ ಏರಿಕೆ ಗಗನಕ್ಕೆ ಮುಟ್ಟಿದೆ. ಹೀಗಾಗಿ ಬಿಜೆಪಿ ನಾಯಕಿಯರು ಮೋದಿಗೆ ಬಳೆ ಕಳುಹಿಸುವುದೆ ಸೂಕ್ತ.

-ಪ್ರಕಾಶ್ ರಾಥೋಡ್, ವಿಧಾನಪರಿಷತ್ ಸದಸ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News