×
Ad

ತಂಬಾಕು ಮುಕ್ತ ಜಿಲ್ಲೆಯಾಗಿಸಲು ಸಮನ್ವಯತೆ ಅಗತ್ಯ: ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್

Update: 2019-05-16 21:50 IST

ಧಾರವಾಡ, ಮೇ 16: ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಮತ್ತು ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಕಂಡು ಬಂದಲ್ಲಿ ದಂಡ ವಿಧಿಸಲು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ತನಿಖಾ ದಾಳಿಗಳನ್ನು ಕೈಗೊಳ್ಳಲು, ಧಾರವಾಡ ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಕೈ ಜೋಡಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಹಾಗೂ ಗ್ರಾಮೀಣ ಪ್ರದೇಶದ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಶಾಲಾ, ಕಾಲೇಜು, ಆಸ್ಪತ್ರೆ, ಬಸ್‌ನಿಲ್ದಾಣ ಮತ್ತು ಸರಕಾರಿ ಕಚೇರಿಗಳ ಆವರಣದಲ್ಲಿ ತಂಬಾಕು ಸೇವನೆಯನ್ನು ನಿಷೇಧಿಸಲಾಗಿದ್ದು, ಈ ಕುರಿತ ಜಾಗೃತಿಗಾಗಿ ತಂಬಾಕು ಸೇವನೆಯಿಂದ ಆಗುವ ಹಾನಿ ಮತ್ತು ವಿಧಿಸುವ ದಂಡದ ಕುರಿತು ಮಾಹಿತಿ ಫಲಕಗಳನ್ನು ಅಳವಡಿಸುವಂತೆ ಅವರು ಸೂಚಿಸಿದರು. ಮೇ 31 ರಂದು ಜಿಲ್ಲೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ವಿವಿಧ ರೀತಿಯ ಜನ ಜಾಗೃತಿ ಹಾಗೂ ಮಾಹಿತಿ ಶಿಬಿರದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ, ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ಎಂ. ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೋಟ್ಪಾಕಾಯ್ದೆಯ ಯಶಸ್ವಿ ಅನುಷ್ಠಾನಕ್ಕಾಗಿ ತನಿಖಾ ದಾಳಿಗಳನ್ನು ಕೈಗೊಂಡಿರುವ ಕುರಿತು ವಿವರಿಸಿದರು.

2018-19ನೇ ಸಾಲಿನಲ್ಲಿ ಪ್ರಕರಣಗಳನ್ನು ದಾಖಲಿಸಿ 73,400 ರೂ.ದಂಡವನ್ನು ವಿಧಿಸಲಾಗಿದೆ. 2019-20ನೆ ಸಾಲಿನ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಕರಣಗಳನ್ನು ದಾಖಲಿಸಿ 21,780 ರೂ.ಗಳ ದಂಡ ವಿಧಿಸಲಾಗಿದೆ ಎಂದ ಅವರು, ರಾಜ್ಯ ತಂಬಾಕು ಉತ್ಪನ್ನ ಕಂಪನಿಗಳ ಪ್ರತಿನಿಧಿಗಳ ಜೊತೆ ವ್ಯವಹರಿಸುವ ಬಗ್ಗೆ ರಾಜ್ಯ ನಿಯಮಾವಳಿ ಕುರಿತು ವಿವರಿಸಿದರು.

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಸ್ಥಾಪಿಸಿ, ತಂಬಾಕಿನ ವ್ಯಸನದಿಂದ ಮುಕ್ತರಾಗಲು ಉಚಿತ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ಸುಜಾತಾ ವೀ ಹಸವೀಮಠ, ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಸುರಕ್ಷತಾ ಇಲಾಖೆ ಮತ್ತು ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು, ಬೆಳಗಾವಿ ವಿಭಾಗೀಯ ಸಂಯೋಜಕ ಮಹಾಂತೇಶ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News