18 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ

Update: 2019-05-18 14:19 GMT

ಬೆಂಗಳೂರು, ಮೇ 18: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 18 ಕ್ಷೇತ್ರಗಳಲ್ಲಿ ನಿಶ್ಚಿತವಾಗಿಯೂ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಶನಿವಾರ ಆಂಧ್ರಪ್ರದೇಶದ ತಿರುಪತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾತು ಕೊಟ್ಟಿದ್ದೇವೆ. ಅದರಂತೆ ಮೈತ್ರಿಕೂಟ 18 ಸ್ಥಾನ ಗೆಲ್ಲುತ್ತದೆ. ನಮ್ಮ ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇದೇ ವೇಳೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ, ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ನಾವು ಕಾಂಗ್ರೆಸ್ ಜೊತೆ ಇದ್ದೇವೆ. ಎಲ್ಲರೂ ಮೇ 23ರ ಚುನಾವಣಾ ಫಲಿತಾಂಶ ಬರುವವರೆಗೂ ಕಾಯಬೇಕು ಎಂದು ಹೇಳಿದರು.

ವಿಶೇಷ ಪೂಜೆ: ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ದೇವೇಗೌಡ, ಪತ್ನಿ ಚನ್ನಮ್ಮ, ಸಿಎಂ ಕುಮಾರಸ್ವಾಮಿ, ಸಚಿವ ರೇವಣ್ಣ ಸೇರಿದಂತೆ ಕುಟುಂಬದ ಬಹುತೇಕ ಸದಸ್ಯರು ಈ ವೇಳೆ ಹಾಜರಿದ್ದರು.

ಗಣ್ಯರ ಶುಭ ಹಾರೈಕೆ: ಮಾಜಿ ಪ್ರಧಾನಿ ದೇವೇಗೌಡ ಅವರ 87ನೆ ವರ್ಷದ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಸೇರಿದಂತೆ ಹಲವು ಮಂದಿ ಗಣ್ಯರು ಶುಭ ಹಾರೈಸಿದ್ದಾರೆ.

'ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಗಳು, ನಾನು ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ದೇವೇಗೌಡರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಾರೆ.

'ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ರೈತರು ಮತ್ತು ಗ್ರಾಮ ಭಾರತದ ಬಗೆಗಿನ ಅವರ ಕಾಳಜಿ ಹಾಗೂ ಇಳಿವಯಸ್ಸಿನಲ್ಲಿಯೂ ದಣಿವರಿಯದ ಹೋರಾಟದ ಕೆಚ್ಚು ನನಗೆ ಸದಾ ಪ್ರೇರಣೆ. ಅವರಿಗೆ ಆರೋಗ್ಯ ಮತ್ತು ಆಯುಷ್ಯ ಸಿಗಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News