ಚುನಾವಣೆಯಲ್ಲಿ ಕಾಂಗ್ರೆಸ್ ನ ಅತಿರಥ, ಮಹಾರಥರಿಗೆ ಸೋಲು: ಯಡಿಯೂರಪ್ಪ

Update: 2019-05-18 16:34 GMT

ಹುಬ್ಬಳ್ಳಿ, ಮೇ 18: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್‌ಗಳಲ್ಲಿ ಗೊಂದಲಗಳು ಉಲ್ಭಣಿಸಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಸರಕಾರವನ್ನು ವಿಸರ್ಜಿಸುವಂತೆ ಹೇಳಿದರೆ, ಅವರ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ, ಇವರಿಬ್ಬರ ಹೇಳಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.

ರಾಜ್ಯ ಸರಕಾರವನ್ನು ವಿರ್ಸಜಿಸುವುದು ಸುಲಭದ ಕೆಲಸವಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ಒಟ್ಟಿಗೆ ಸೇರಿ ಸಚಿವ ಸಂಪುಟದಲ್ಲಿ ಬಹುಮತದ ತೀರ್ಮಾನ ಕೈಗೊಳ್ಳಬೇಕು. ಒಂದು ವೇಳೆ ಜೆಡಿಎಸ್ ತೀರ್ಮಾನಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದರೆ, ವಿಧಾನಸಭೆ ವಿರ್ಸಜನೆ ಸಾಧ್ಯವಿಲ್ಲ. ಇದಕ್ಕೆ ಕಾನೂನಿನ ತೊಡಕು ಎದುರಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಸರಕಾರ ತಾನಾಗಿಯೇ ಪತನಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನವರ ಮನಸ್ಸಿನಲ್ಲಿ ಏನಿದೆ, ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ. ಉಭಯ ಪಕ್ಷಗಳಲ್ಲಿ ನಡೆಯುತ್ತಿರುವ ಗೊಂದಲ ನೋಡುತ್ತಿದ್ದರೆ, ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಮೈತ್ರಿ ಸಂಕಷ್ಟಕ್ಕೆ ಸಿಲುಕುವುದು ಸ್ಪಷ್ಟ ಎಂದು ಅವರು ತಿಳಿಸಿದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅತಿರಥ, ಮಹಾರಥರು ಸೋಲು ಅನುಭವಿಸಲಿದ್ದಾರೆ. ಎರಡು ಪಕ್ಷಗಳು ಗೊಂದಲದ ಗೂಡಾಗಿವೆ. ಹೀಗಾಗಿ, ಉಭಯ ಪಕ್ಷಗಳ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಯಡಿಯೂರಪ್ಪ ವ್ಯಂಗ್ಯವಾಡಿದರು.

ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ನಡೆಯಲಿರುವ ಉಪ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬರುತ್ತದೆ. ಎರಡು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಕನಿಷ್ಠ 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ ಸೇರಿದಂತೆ 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ನಾಳೆ ಮತದಾನ ಆಗುವವರೆಗೆ ಹುಬ್ಬಳ್ಳಿಯಲ್ಲಿಯೇ ಇದ್ದು, ಆನಂತರ ಬೆಂಗಳೂರಿಗೆ ಹೊರಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News