ಮೇ 23ರ ನಂತರ ರಾಜಕೀಯ ಚಿತ್ರಣ ಬದಲು: ಯಡಿಯೂರಪ್ಪ

Update: 2019-05-20 14:59 GMT

ಬೆಂಗಳೂರು, ಮೇ 20: ರಾಷ್ಟ್ರಮಟ್ಟದಲ್ಲಿನ ಎಲ್ಲ ಸಮೀಕ್ಷೆಗಳಲ್ಲೂ ಬಿಜೆಪಿ ಹಾಗೂ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಬಿಂಬಿಸಲಾಗುತ್ತಿದೆ. ಮೇ 23 ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದ ಚಿತ್ರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳನ್ನು ರಾಜಕೀಯ ನಾಯಕರು ನಡೆಸಲು ಸಾಧ್ಯವೇ? ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಹತಾಶರಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ 22-23 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಚುನಾವಣೋತ್ತರ ಸಮೀಕ್ಷೆಯಲ್ಲಿಯೂ ಅದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ಮಾಧ್ಯಮಗಳ ಸಮೀಕ್ಷೆಗಳನ್ನು ನೋಡಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಹತಾಶರಾಗಿ ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಬರಪರಿಸ್ಥಿತಿ ಶಮನಗೊಂಡು, ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಲು ಪಕ್ಷದ ಕಚೇರಿಯಲ್ಲಿ ವಿಶೇಷ ಹೋಮ-ಹವನ ನಡೆಸಲಾಗುತ್ತಿದೆ. ಮೇ 23ರ ಬಳಿಕ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿಯೂ ರಾಜಕೀಯ ಬದಲಾವಣೆಯಾಗಲಿದೆ ಎಂದು ಅವರು ಹೇಳಿದರು.

ಧರ್ಮಸ್ಥಳದಲ್ಲಿ ಇದೇ ಮೊದಲ ಬಾರಿಗೆ ಜಲಕ್ಷಾಮ ಎದುರಾಗಿದ್ದು, ಭಕ್ತಾದಿಗಳು ಪ್ರವಾಸ ಮುಂದೂಡುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳೇ ಮನವಿ ಮಾಡಿಕೊಂಡಿದ್ದಾರೆ. ಇನ್ನು ಎರಡು, ಮೂರು ವಾರಗಳಲ್ಲಿ ಮಳೆಯಾಗದೇ ಇದ್ದರೆ ಪರಿಸ್ಥಿತಿ ಕಠಿಣವಾಗಲಿದೆ. ಈ ಹಂತದಲ್ಲಿ ಸರಕಾರ ತಕ್ಷಣ ಮಧ್ಯಪ್ರವೇಶಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ರಾಜ್ಯದ ಬಿಜೆಪಿ ನಾಯಕರ ತಂಡ ಅಂಡಮಾನ್ ನಿಕೋಬಾರ್ ಪ್ರವಾಸಕ್ಕೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದಿನ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣಾ ಕೆಲಸದಲ್ಲಿ ನಿರತರಾಗಿದ್ದ ಸ್ನೇಹಿತರು, ಅಂಡಮಾನ್ ಪ್ರವಾಸಕ್ಕೆ ತೆರಳಿ, ಸಭೆ ನಡೆಸಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News