ಮತ ಎಣಿಕೆಗೆ ಸಕಲ ಸಿದ್ಧತೆ: ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ

Update: 2019-05-21 16:25 GMT

ರಾಮನಗರ, ಮೇ 21: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅರ್ಚಕರಹಳ್ಳಿ ಬಳಿಯಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 23ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲು ಸೇವಾ ಮತ್ತು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುವುದು. ಆನಂತರ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗಿರುವ ಮತ ಎಣಿಕೆ ನಡೆಯಲಿದೆ ಎಂದರು.

ಮತ ಎಣಿಕೆಗೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಪ್ರತ್ಯೇಕವಾಗಿ ಎಣಿಕೆ ಮಾಡಲು ವ್ಯವಸ್ಥೆಗೊಳಿಸಲಾಗಿದೆ. ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ 19 ಸುತ್ತು, ರಾಜರಾಜೇಶ್ವರಿ ಕ್ಷೇತ್ರದಲ್ಲಿ 28 ಸುತ್ತು, ಬೆಂಗಳೂರು ದಕ್ಷಿಣ 25 ಸುತ್ತು, ಅನೇಕಲ್ 27 ಸುತ್ತು, ಮಾಗಡಿ 22 ಸುತ್ತು, ರಾಮನಗರ 20 ಸುತ್ತು, ಕನಕಪುರ 22 ಸುತ್ತು ಮತ್ತು ಚನ್ನಪಟ್ಟಣ 19 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಕನಿಷ್ಠ 14 ಮೇಜುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಪ್ರತಿ ಮೇಜಿಗೆ ಮೇಲ್ವಿಚಾರಕರು, ಸಹಾಯಕ ಸಿಬ್ಬಂದಿ ಮತ್ತು ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳು 14 ಮೇಜುಗಳಿಗೆ ತಲಾ ಒಬ್ಬ ಎಣಿಕೆ ಏಜೆಂಟರನ್ನು ನೇಮಿಸಲು ಅವಕಾಶ ನೀಡಲಾಗಿದೆ. ಎರಡು ಕೊಠಡಿಗಳಿರುವ ಕ್ಷೇತ್ರಗಳಲ್ಲಿ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿ ಒಂದೊಂದು ಕೊಠಡಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಾರೆ ಎಂದು ರಾಜೇಂದ್ರ ತಿಳಿಸಿದರು.

ಮತ ಎಣಿಕೆಗೆ ವಿವಿಧ ಇಲಾಖೆಗಳಿಂದ ಒಂದು ಸಾವಿರಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅವರೆಲ್ಲರಿಗೂ ತರಬೇತಿ ನೀಡಲಾಗಿದೆ. ಮತ ಎಣಿಕೆಗೆ ಸಂಬಂಧಿಸಿದಂತೆ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಅಂತರ್ಜಾಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು. ಬೆಳಗ್ಗೆ ಎಳು ಗಂಟೆಗೆ ಮತಯಂತ್ರಗಳಿರುವ ಕೊಠಡಿಗಳನ್ನು ತೆರೆಯಲಾಗುವುದು ಅಭ್ಯರ್ಥಿಗಳ ಪರ ಏಜೆಂಟರು ಎಳು ಗಂಟೆಗೆ ಸರಿಯಾಗಿ ಆಗಮಿಸಿ ವರದಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮೊಬೈಲ್ ನಿಷೇಧ: ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ. ಸಂಪೂರ್ಣವಾಗಿ ಮತ ಎಣಿಕೆ ಕೇಂದ್ರ ಸಿಸಿಟಿವಿ ಮತ್ತು ಕ್ಯಾಮೆರಾಗಳಿಂದ ಆವೃತ್ತವಾಗಿದೆ. ಚುನಾವಣಾ ಸಿಬ್ಬಂದಿ ಸೇರಿದಂತೆ ಮತ ಎಣಿಕೆ ಕೇಂದ್ರಕ್ಕೆ ಬರುವವರು ಮೊಬೈಲ್ ಫೋನ್‌ಗಳನ್ನು ತರುವಂತಿಲ್ಲ ಜೊತೆಗೆ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಬಿ.ರಮೇಶ್ ಮಾತನಾಡಿ, ಎಣಿಕೆ ಕೇಂದ್ರಕ್ಕೆ ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಪ್ರವೇಶ ದ್ವಾರದಲ್ಲಿ ಎಲ್ಲರನ್ನೂ ತಪಾಸಣೆಗೊಳಪಡಿಸಿ ಬಿಡಲಾಗುತ್ತದೆ. ಎರಡನೇ ಹಂತದಲ್ಲಿ ಮತ್ತೆ ತಪಾಸಣೆ ನಡೆಸಲಾಗುತ್ತದೆ. ಮೂರನೇ ಹಂತದಲ್ಲಿ ಎಣಿಕೆ ಕೇಂದ್ರವನ್ನು ಸಂಪೂರ್ಣವಾಗಿ ಅರೆಸೇನಾ ಪಡೆ ಸುಪರ್ದಿಗೆ ನೀಡಲಾಗಿದೆ. ಇದಕ್ಕಾಗಿ ಸಶಸ್ತ್ರ ಮೀಸಲು ಪಡೆಯ ಮೂರು ಕಂಪೆನಿಗಳನ್ನು ನಿಯೋಜಿಲಾಗುತ್ತಿದೆ ಎಂದರು.

ಅಧಿಕಾರಿಗಳು, ಎಣಿಕೆಗೆ ನಿಯೋಜಿಸಿರುವ ಸಿಬ್ಬಂದಿ ಅಭ್ಯರ್ಥಿಗಳು, ಎಣಿಕೆ ಏಜೆಂಟರು ಸೇರಿದಂತೆ ಜಿಲ್ಲಾ ಚುನಾವಣಾಧಿಕಾರಿಯವರಿಂದ ಪಾಸ್ ಪಡೆದಿರುವವರಿಗೆ ಮಾತ್ರ ಎಣಿಕೆ ಕೇಂದ್ರದೊಳಗೆ ಪ್ರವೇಶ ನೀಡಲಾಗುತ್ತದೆ. ಮತ ಎಣಿಕೆ ಕಾರಣದಿಂದ ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಇದಕ್ಕಾಗಿ ಕ್ಷಿಪ್ರ ಕಾರ್ಯಾಚರಣೆ ಪಡೆ ತಂಡಗಳು, ರಾಜ್ಯ ಮೀಸಲು ಪೊಲೀಸ್ ಪಡೆ ಮತ್ತು ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಸಂಚಾರಿ ಗಸ್ತು ತಂಡಗಳನ್ನು ಸನ್ನದ್ಧವಾಗಿ ಇರಿಸಲಾಗಿದೆ. ಪರಿಸ್ಥಿತಿ ದುರ್ಬಳಕೆ ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News