ಕುತೂಹಲಕ್ಕೆ ಕಾರಣವಾದ ಚಂದ್ರಬಾಬು ನಾಯ್ಡು- ದೇವೇಗೌಡ ಭೇಟಿ

Update: 2019-05-22 14:05 GMT

ಬೆಂಗಳೂರು, ಮೇ 22: ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರದ ರಚನೆಗೆ ಕಸರತ್ತು ನಡೆಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಜೆಡಿಎಸ್ ರಾಷ್ಟ್ರೀಯಾಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ನಿನ್ನೆ ರಾತ್ರಿ ಇಲ್ಲಿನ ಪದ್ಮನಾಭನಗರದಲ್ಲಿನ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಚಂದ್ರಬಾಬು ನಾಯ್ಡು ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸರಕಾರ ರಚನೆ ಪ್ರಕ್ರಿಯೆಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವುದು ಹಾಗೂ ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚಿಸುವ ನಿಟ್ಟಿನಲ್ಲಿ ಬಿಎಸ್ಪಿ ವರಿಷ್ಠೆ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೊಸದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡಿಎಂಕೆ ಮುಖ್ಯಸ್ಥ ಸ್ಟಾಲಿನ್, ಕೇರಳ ಸಿಎಂ ಪಿಣರಾಯಿ ವಿಜಯ್ ಸೇರಿ ಹಲವು ಮುಖಂಡರನ್ನು ಭೇಟಿ ಮಾಡಿದ್ದರು.

ಇದೀಗ ಲೋಕಸಭೆ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೆ ಚಂದ್ರಬಾಬು ನಾಯ್ಡು, ದೇವೇಗೌಡ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಈ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News