ಪೂರ್ವ ಪ್ರಾಥಮಿಕ ಶಾಲೆ ಪ್ರಾರಂಭ ಸ್ವಾಗತಾರ್ಹ ಕ್ರಮ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

Update: 2019-05-25 15:18 GMT

ಬೆಂಗಳೂರು, ಮೇ 25: ಸರಕಾರದ ವತಿಯಿಂದಲೇ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಕುರಿತಂತೆ ರಾಜ್ಯ ಸರಕಾರ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುವುದಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರಕಾರಿ ಶಾಲೆಗಳು ಎಲ್ಲ ಆಯಾಮಗಳಲ್ಲೂ ಸದೃಢಗೊಳ್ಳಬೇಕು. ಸರಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು. ಈ ಸಂಬಂಧ 2017ರಲ್ಲಿಯೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ 21ಅಂಶಗಳ ಸರಕಾರಿ ಶಾಲಾ ಸಬಲೀಕರಣ ಸಮಿತಿಯ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ ಸರಕಾರ ಹಂತ, ಹಂತವಾಗಿ ಎಲ್ಲ ಅಂಶಗಳನ್ನು ಜಾರಿ ಮಾಡುತ್ತಿದೆ.

ಕಡ್ಡಾಯ ಶಿಕ್ಷಣ ಕಾಯ್ದೆಯಡಿಯಲ್ಲಿ ಖಾಸಗಿ ಶಾಲೆಗಳಿಗೆ ಆರ್‌ಟಿಇ ಶುಲ್ಕವನ್ನು ಭರಿಸುತ್ತಿರುವ ಕ್ರಮವನ್ನು ಸ್ಥಗಿತಗೊಳಿಸಿ ಅದೇ ಹಣವನ್ನು ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಬಳಸಬೇಕು. ಹಾಗೂ ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ಆಯಾ ಖಾಸಗಿ ಶಾಲೆಗಳ ಸಾಮಾಜಿಕ ಜವಾಬ್ದಾರಿಯಾಗಬೇಕೆಂಬ ಸ್ಪಷ್ಟ ಶಿಫಾರಸ್ಸನ್ನು ಮಾಡಲಾಗಿರುತ್ತದೆ. ಸರಕಾರಿ ಈ ಅಂಶವನ್ನು ಕೂಲಂಕಷವಾಗಿ ಪರಿಶೀಲಿಸಿ ನಿಯಮವಾಗಿ ರೂಪಿಸಬೇಕೆಂದು ಅವರು ಪತ್ರಿಕಾ ಪ್ರಕಟನೆಯ ಮೂಲಕ ಮನವಿ ಮಾಡಿದ್ದಾರೆ.

ಹಕ್ಕೊತ್ತಾಯಗಳು

1. ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು.

2. ಸರಕಾರಿ ಶಾಲೆಗಳನ್ನು ಮುಚ್ಚುವ, ವಿಲೀನಗೊಳಿಸುವ ಪ್ರಕ್ರಿಯೆಗಳಿಗೆ ಶಾಶ್ವತ ಅಂಕುಶವನ್ನು ಹಾಕುವುದು.

3. ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಸ್ಪರ್ಧಿಸುವ ರೀತಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಕುರಿತಂತೆ ಆರ್‌ಟಿಇ ಉಳಿತಾಯ ಹಣವನ್ನು ಬಳಕೆ ಮಾಡಿಕೊಳ್ಳುವುದು.

4. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಸರಕಾರಿ ಶಾಲೆಗಳಲ್ಲಿ ಶಿಕ್ಷಣವನ್ನು ನೀಡುವುದು.

5. ಸರಕಾರಿ ಶಾಲೆಗಳಲ್ಲಿ 1ನೆ ತರಗತಿಯಿಂದಲೇ ಆಂಗ್ಲ ಭಾಷೆಯನ್ನು ಪರಿಣಾಮಕಾರಿಯಾಗಿ ಕಲಿಸುವ ವ್ಯವಸ್ಥೆಯನ್ನು ರೂಪಿಸಬೇಕು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News