ಲಾರಿ ಢಿಕ್ಕಿ : ಕಾರು ಚಾಲಕನ ಮೃತ್ಯು

Update: 2019-05-25 15:34 GMT

ಈಶ್ವರಮಂಗಲ : ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಶೇಖಮಲೆ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಲಾರಿ ಮತ್ತು ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಮಂಗಳೂರಿನ ಕಿನ್ನಿಕಂಬಳ ನಿವಾಸಿ ಮಧುಮಯ್ಯ (64) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ. 

ಮಧುಮಯ್ಯ ಅವರು ಮಂಗಳೂರಿನಿಂದ ಮಡಿಕೇರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ  ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತ್ತು. 

ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಮಧುಮಯ್ಯ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಹೋಗುತ್ತಿದ್ದ ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ  ಅಕ್ಕಿ ಸಾಗಾಟದ ಲಾರಿಗೆ ಢಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. 

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಲಾರಿ ಚಾಲಕನೇ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಯ ಹಿನ್ನಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. 
ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News