ಮಂಗಳೂರಿನಲ್ಲಿ ನೀರಿನ ಕೊರತೆ: ಮೇ 27ಕ್ಕೆ ಸಿಎಂ ನೇತೃತ್ವದಲ್ಲಿ ಸಭೆ- ಯು.ಟಿ.ಖಾದರ್

Update: 2019-05-25 15:41 GMT

ಮಂಗಳೂರು: ನಿರೀಕ್ಷಿತ ಸಮಯದಲ್ಲಿ ಮಳೆ ಬಾರದ ಕಾರಣ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಅಭಾವ ತಲೆದೋರಿದ್ದು, ಉಸ್ತುವಾರಿ ಸಚಿವ ಯು.ಟಿ.ಖಾದರ್ ಇದರ ಗಂಭೀರತೆಯನ್ನು ಮುಖ್ಯಮಂತ್ರಿಗೆ ವಿವರಿಸಿದ್ದು, ಇದನ್ನು ಮನಗಂಡು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೇ 27 ರಂದು ವಿಧಾನಸೌಧದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನರ ಸಹಕಾರದೊಂದಿಗೆ ರೇಶನಿಂಗ್ ನಿಯಮ ಪ್ರಕಾರ ನೀರು ಬಿಡಲಾಗುತ್ತಿದ್ದರೂ ಮಳೆ ಬಾರದೇ ಇದ್ದರೆ ಮುಂದಿನ ಕೆಲವೇ ದಿನಗಳಲ್ಲಿ ಸಂಪೂರ್ಣ ನೀರಿನಭಾವ ತಲೆದೋರಲಿದೆ. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕ್ಷೇತ್ರ, ಉಳ್ಳಾಲ ಸಯ್ಯದ್ ಮದನಿ ದರ್ಗಾ ಸೇರಿದಂತೆ ದಿನನಿತ್ಯ ಸಹಸ್ರಾರು ಭಕ್ತಾದಿಗಳು ಆಗಮಿಸುವ ಧಾರ್ಮಿಕ ಕೇಂದ್ರಗಳಲ್ಲೂ ನೀರಿನ ಕೊರತೆ ಉಂಟಾಗಿದೆ. ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ಮಹಾನಗರ ಪಾಲಿಕೆ ಕಮಿಷನರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಗಳ ಸಭೆಯನ್ನು ಮುಖ್ಯಮಂತ್ರಿಗಳು ಕರೆದಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News