ಬೆಳಗಾವಿ: ರಸ್ತೆ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತ್ಯು

Update: 2019-05-27 14:12 GMT

ಬೆಳಗಾವಿ, ಮೇ 27: ಹೆದ್ದಾರಿ ವಿಸ್ತರಣೆ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು ಮೂವರು ಮಣ್ಣನಡಿಯಲ್ಲಿ ಸಿಲುಕಿ ಉಸಿರುಗಟ್ಟಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಇಲ್ಲಿನ ಖಾನಾಪುರ ತಾಲೂಕಿನ ದೇಸೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.

ಮೃತ ಕೂಲಿ ಕಾರ್ಮಿಕರನ್ನು ಜಾರ್ಖಂಡ್ ಮೂಲದ ದುರ್ಗೇಶ್ ಕುಮಾರ್(22), ಅರ್ಜುನ್ ಸಿಂಗ್(21) ಹಾಗೂ ಸುಖಾನ್(25) ಎಂದು ಗುರುತಿಸಲಾಗಿದೆ. ರಸ್ತೆಗೆ ಸೇತುವೆ ನಿರ್ಮಿಸಲು ಹಾಕಿದ್ದ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ರಸ್ತೆಗೆ ಸೇತುವೆ ನಿರ್ಮಾಣ ಮಾಡಲು ಹಾಕಿದ್ದ ಮಣ್ಣು ಕುಸಿದು ಅವಘಡ ಸಂಭವಿಸಿದ್ದು, ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿ ಜೊತೆಗೆ ಕಾರ್ಮಿಕರು ಕೈಜೋಡಿಸಿ ಮಣ್ಣಿನ ಕೆಳಗೆ ಸಿಲುಕಿದ್ದ ಮೂರು ಶವಗಳನ್ನು ಹೊರ ತೆಗೆದಿದ್ದಾರೆ ಎಂದು ಗೊತ್ತಾಗಿದೆ.

ಅಶೋಕ ಕಂಪೆನಿಯಿಂದ ರಸ್ತೆ ನಿರ್ಮಾಣ ಕೆಲಸ ಮಾಡಿಸಲಾಗುತ್ತಿತ್ತು. ಇಂಜಿನಿಯರ್ ಅಚಾತುರ್ಯದಿಂದಲೇ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಕಾರ್ಮಿಕರಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಿರಲಿಲ್ಲ ಎಂದು ಕೂಲಿ ಕಾರ್ಮಿಕರು ಗಂಭೀರ ಆರೋಪ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News