×
Ad

ಕಿರು ಬಂದರುಗಳ ಅಭಿವೃದ್ದಿಪಡಿಸಿ, ಉದ್ಯೋಗ ಸೃಜಿಸಿ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-05-29 17:51 IST

ಬೆಂಗಳೂರು, ಮೇ 29: ರಾಜ್ಯದ 12 ಕಿರು ಬಂದರುಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಒತ್ತು ನೀಡಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅಧಿಕಾರಿಗಳಿಗೆ ಇಂದಿಲ್ಲಿ ಸೂಚಿಸಿದ್ದಾರೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು. ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಕಾರವಾರ ಬಂದರಿನ 2ನೆ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ.ಉದ್ದದ ಬರ್ತ್ ಅನ್ನು ವಿಸ್ತರಿಸಲು ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿದ್ದು, ಸರಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಸಾಲಿಗೆ 54.10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಮತ್ತು ಮಂಗಳೂರು ಹಳೇ ಬಂದರಿನಲ್ಲಿ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ತಾಂತ್ರಿಕ ಮಂಜೂರಾತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆ ಮಾಹಿತಿ ಒದಗಿಸಲಾಯಿತು.

ಸಮುದ್ರ ಕೊರೆತ ತಡೆಗೆ ತಡೆಗೋಡೆ: ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ದೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು. ಕಡಲ ಬದಿಯಲ್ಲಿರುವ ಜನರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಕಡಲಕೊರೆತ ಸಂಭವಿಸುತ್ತಿದ್ದ ಪ್ರದೇಶಗಳಲ್ಲಿ ಈವರೆಗೆ 64.35 ಉದ್ದದ ತಡೆ ನಿರ್ಮಿಸಲಾಗಿದೆ. ಉದಯವಾರ, ಮರವಂತೆ, ಕೋಡಿಬೆಂಗ್ರೆ, ಸೋಮೇಶ್ವರ, ಮುಕ್ಕಚೇರಿ ಸೇರಿದಂತೆ ಒಟ್ಟು 12 ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಮತ್ತು ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಉಳ್ಳಾಲ ಮತ್ತು ಉದಯವಾರದಲ್ಲಿ ತಡೆಗೋಡೆ ನಿರ್ಮಾಣವಾದ ಬಳಿಕ ಕಡಲಕೊರೆತ ಕಡಿಮೆಯಾಗಿದ್ದು ಮೀನುಗಾರಿಕಾ ಚಟುವಟಿಕೆಗಳು ಹೆಚ್ಚಾಗಿದೆ ಎಂದು ಇತ್ತೀಚೆಗೆ ಸ್ವಯಂಸೇವಾ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News