ಮೈತ್ರಿ ಸರಕಾರ ಅಸ್ಥಿರಕ್ಕೆ ಪ್ರಯತ್ನಿಸುವುದಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

Update: 2019-05-29 12:33 GMT

ಬೆಂಗಳೂರು, ಮೇ 29: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಸ್ಥಿರಗೊಳಿಸಲು ನಾವು ಪ್ರಯತ್ನಿಸುವುದಿಲ್ಲ. ಒಂದು ವೇಳೆ ಅವರೇ ಕಿತ್ತಾಡಿಕೊಂಡು ಸರಕಾರ ಉರುಳಿದರೆ ನಾವು ಸುಮ್ಮನಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆಯನ್ನು ನಾವು ಬಯಸುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಶಾಸಕರೂ ಚುನಾವಣೆ ಎದುರಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಇದೇ ವೇಳೆ ತಿಳಿಸಿದರು. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಸಂಬಂಧ ಹದಗೆಡುತ್ತಿದೆ. ಉಭಯ ಪಕ್ಷಗಳ ಶಾಸಕರ ನಡುವೆ ಅಸಮಾಧಾನ ಹೆಚ್ಚಾಗುತ್ತಿದೆ. ಯಾವುದೇ ಸಂದರ್ಭದಲ್ಲೂ ಸರಕಾರ ಪತನವಾಗಬಹುದು. ಅತ್ಯಂತ ದೊಡ್ಡಪಕ್ಷವಾಗಿ ನಾವು ಕೈಕಟ್ಟಿ ಕೂರಲು ಸಾಧ್ಯವೇ? ಎಂದು ಯಡಿಯೂರಪ್ಪ ಪ್ರಶ್ನಿಸಿದರು.

ಕೋರ್ ಕಮಿಟಿ ಸಭೆ: ಜೂ.5ಕ್ಕೆ ಪಕ್ಷದ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಅಲ್ಲಿ ಮುಂದಿನ ಹೋರಾಟಗಳ ಬಗ್ಗೆ ಚರ್ಚಿಸಲಾಗುವುದು. ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ರಾಜ್ಯದ ಸಮಸ್ಯೆಗಳನ್ನಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.

ನಿಯೋಜಿತ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯಾಧ್ಯಕ್ಷ ಅಮಿತ್ ಷಾ ಸೇರಿದಂತೆ ಇನ್ನಿತರ ಮುಖಂಡರನ್ನು ಭೇಟಿ ಮಾಡಲಿದ್ದೇನೆ. ಕೇಂದ್ರದಲ್ಲಿ ರಾಜ್ಯಕ್ಕೆ ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಸಚಿವ ಸ್ಥಾನಗಳು ದೊರೆಯುವ ನಿರೀಕ್ಷೆಗಳಿವೆ ಎಂದು ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದರು.

‘ಬಳ್ಳಾರಿಯ ಜಿಂದಾಲ್ ಸಂಸ್ಥೆಗೆ ಜಮೀನು ಕೊಟ್ಟಿರುವುದನ್ನು ಸರಕಾರ ಕೂಡಲೇ ಹಿಂಪಡೆಯಬೇಕು. ಯಾವುದೇ ಕಾರಣಕ್ಕೂ ಜಮೀನು ನೀಡಬಾರದು. ಈ ಬಗ್ಗೆ ಸಂಪುಟ ಕೈಗೊಂಡಿರುವ ತೀರ್ಮಾನದ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು.ಈ ಕುರಿತು ಪಕ್ಷದಿಂದ ಹೋರಾಟ ರೂಪಿಸಬೇಕಾಗುತ್ತದೆ’

-ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News