ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ: ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಪುತ್ರ ಪೊಲೀಸ್ ವಶಕ್ಕೆ

Update: 2019-05-29 15:15 GMT

ಬೆಳಗಾವಿ, ಮೇ 29: ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ರೈತರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಅಧಿಕಾರಿಗಳ ಕ್ರಮ ಖಂಡಿಸಿ ರೈತರ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಲಕ್ಷ್ಮಿಹೆಬ್ಬಾಳ್ಕರ್ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬುಧವಾರ ಕ್ಷೇತ್ರ ವ್ಯಾಪ್ತಿಯ ಹಲಗಾ ಗ್ರಾಮದಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆಗೆ ವಶಪಡಿಸಿಕೊಂಡಿರುವ ಭೂಮಿಯನ್ನು ಕಾಮಗಾರಿ ಆರಂಭಿಸುತ್ತಿರುವುದನ್ನು ವಿರೋಧಿಸಿ ರೈತರ ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕೆ ಬೆಂಬಲ ವ್ಯಕ್ತಪಡಿಸಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ರೈತರ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಮುಖಂಡ ಮೃಣಾಲ್ ಸೇರಿದಂತೆ ಹಲವಾರು ರೈತರನ್ನು ಬೆಳಗಾವಿ ಗ್ರಾಮೀಣಾ ಠಾಣಾ ಪೊಲೀಸರು ವಶಕ್ಕೆ ಪಡೆದರು ಎಂದು ಗೊತ್ತಾಗಿದೆ. ರೈತರು ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿರುವ ನೀರಾವರಿ ಜಮೀನಿನ ಮೇಲೆ ಅಧಿಕಾರಿಗಳು ವಶಕ್ಕೆ ಮುಂದಾಗಿದ್ದಾರೆ. ಈ ಭೂಮಿ ಸುವರ್ಣ ವಿಧಾನಸೌಧದಿಂದ ಕೂಗಳತೆ ದೂರದಲ್ಲಿರುವ ಅತ್ಯಂತ ಸಮೃದ್ಧವಾದ ಜಮೀನು. ಅಂತಹ ಪ್ರದೇಶದಲ್ಲಿ ಜಿಲ್ಲಾಡಳಿತ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ರೈತರು ಆಕ್ಷೇಪಿಸಿದ್ದಾರೆ.

ನಗರದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣವನ್ನು ಜನವಸತಿ ಪ್ರದೇಶದಲ್ಲಿ ಮಾಡುವುದು ಬೇಡ. ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ವಿರೋಧವಿದೆ. ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಚರ್ಚಿಸಿ ಆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು.

ತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ 19 ಎಕರೆ ಜಮೀನನ್ನು ಗುರುತಿಸಲಾಗಿದೆ. ಇದು ನೀರಾವರಿ ಜಮೀನು. ಜನವಸತಿ ಪ್ರದೇಶದ ಹತ್ತಿರದಲ್ಲೇ ಇದೆ. ರೈತರಿಗೆ ಅತ್ಯಂತ ಕಡಿಮೆ ಪರಿಹಾರದ ಪ್ರಸ್ತಾವನೆ ಇಡಲಾಗಿದೆ. ಸೂಕ್ತ ತೀರ್ಮಾನಕ್ಕೂ ಮೊದಲೇ ಏಕಾಏಕಿ ಭೂ ಸ್ವಾಧೀನಕ್ಕೆ ಮುಂದಾಗಿರುವ ಅಧಿಕಾರಿಗಳ ಕ್ರಮಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News