×
Ad

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಾಂತಿಯುತ ಮತದಾನ

Update: 2019-05-29 22:00 IST

ಬೆಂಗಳೂರು, ಮೇ 29: ರಾಜ್ಯದಲ್ಲಿ 61 ನಗರ ಸ್ಥಳೀಯ ಸಂಸ್ಥೆಗಳ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಮೇ 31 ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.

ಲೋಕಸಭಾ ಚುನಾವಣೆಯ ಬಳಿಕ ರಾಜ್ಯದ ಮಿನಿ ಸಮರ ಎಂದು ಬಿಂಬಿತವಾಗಿದ್ದ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಮುಕ್ತಾಯವಾಗಿದೆ. ಎಲ್ಲೆಡೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಬೆಂಗಳೂರು ನಗರದ ಉಪ ಚುನಾವಣೆಯಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆ ಹೊರತುಪಡಿಸಿದರೆ ಉಳಿದ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನವಾಗಿದೆ.

ಎರಡನೆ ಹಂತದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಟ್ಟು 8 ನಗರಸಭೆಗಳು, 33 ಪುರಸಭೆಗಳು ಹಾಗೂ 22 ಪಟ್ಟಣ ಪಂಚಾಯತ್ ಗಳ 1296 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು, 4360 ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಿದೆ.

ಉತ್ಸಾಹದಿಂದ ಹಕ್ಕು ಚಲಾವಣೆ: ಯುವಕ-ಯುವತಿಯರು, ವಿಕಲಚೇತನರು, ಮಹಿಳೆಯರು, ವೃದ್ಧರು ಸೇರಿದಂತೆ ಜನ ಸಾಮಾನ್ಯರು ಅತ್ಯಂತ ಉತ್ಸಾಹದಿಂದಲೇ ಕುಟುಂಬದ ಸದಸ್ಯರೊಂದಿಗೆ ಆಗಮಿಸಿ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಮದ್ಯ ನಿಷೇಧ: ಮುನ್ನೆಚ್ಚರಿಕೆ ಕ್ರಮವಾಗಿ ಮತದಾನ ನಡೆದ 61 ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಮತಗಟ್ಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕೆಲ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ಅಂತ್ಯವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News