ಕೇಂದ್ರ ಸಚಿವರಾಗಿ ಎರಡನೆ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಸದಾನಂದಗೌಡ

Update: 2019-05-30 14:35 GMT

ಬೆಂಗಳೂರು, ಮೇ 30: 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸದಾನಂದಗೌಡ, 1.47 ಲಕ್ಷ ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡ ವಿರುದ್ಧ ಗೆಲುವು ದಾಖಲಿಸಿ ನಾಲ್ಕನೆ ಬಾರಿ ಸಂಸತ್ತು ಪ್ರವೇಶಿಸಿದ್ದು, ಕೇಂದ್ರ ಸಚಿವರಾಗಿ ಎರಡನೆ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಜನಸಂಘದ ಮೂಲಕ ರಾಜಕೀಯ ಜೀವನ ಆರಂಭಿಸಿದ ಡಿ.ವಿ.ಸದಾನಂದಗೌಡ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಬಿಜೆಪಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

1994 ಹಾಗು 1999ರಲ್ಲಿ ಸತತ ಎರಡು ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಸದಾನಂದಗೌಡ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕನಾಗಿಯೂ ಕೆಲಸ ಮಾಡಿದ್ದಾರೆ. ಸದಾನಂದಗೌಡ 2004ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿಯನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸೋಲಿಸುವ ಮೂಲಕ ಮೊದಲ ಬಾರಿ ಸಂಸತ್ತು ಪ್ರವೇಶಿಸಿದರು.

2006ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಸದಾನಂದಗೌಡ ಅಧಿಕಾರಾವಧಿಯಲ್ಲೇ, 2008ರಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ, ಜೆಡಿಎಸ್ ಜೊತೆ ಸೇರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತು. 2009ರಲ್ಲಿ ಕ್ಷೇತ್ರ ಬದಲಾವಣೆ ಮಾಡಿದ ಸದಾನಂದಗೌಡ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸುವ ಮೂಲಕ ಎರಡನೆ ಬಾರಿ ಸಂಸತ್ತು ಪ್ರವೇಶಿಸಿದರು.

ಬದಲಾದ ರಾಜಕೀಯ ಸನ್ನಿವೇಶದಲ್ಲಿ 2011ರಲ್ಲಿ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಕೇವಲ ಒಂದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸದಾನಂದಗೌಡ, ಆನಂತರ ಜಗದೀಶ್ ಶೆಟ್ಟರ್ ಅವರಿಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಯಿತು.

2014ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಪ್ರಚಂಡ ಗೆಲುವು ಸಾಧಿಸಿದ ಸದಾನಂದಗೌಡ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಮೊದಲ ಬಾರಿ ಕೇಂದ್ರ ಸಚಿವರಾಗಿ ಕರ್ತವ್ಯ ನಿರ್ವಹಿಸಿದರು. ಈ ವೇಳೆ ರೈಲ್ವೆ, ಯೋಜನೆ, ಕಾರ್ಯಕ್ರಮ ಅನುಷ್ಠಾನ ಹಾಗೂ ಸಾಂಖ್ಯಿಕ, ರಾಸಾಯನಿಕ ಹಾಗೂ ರಸಗೊಬ್ಬರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಮೋದಿ ಸಂಪುಟದಲ್ಲಿ ಎರಡನೆಯ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News