ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಆಯ್ಕೆ

Update: 2019-06-01 08:25 GMT

ಹೊಸದಿಲ್ಲಿ, ಜೂ.1: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಬೆಳಗ್ಗೆ ನಡೆದ ಪಕ್ಷದ ಸಂಸದೀಯ ಸಮಿತಿ ಸಭೆಯಲ್ಲಿ ಸೋನಿಯಾರನ್ನು ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಲಾಯಿತು.

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋನಿಯಾರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಪ್ರಸ್ತಾವಿಸಿದರು. ಸಂಸದೀಯ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್‌ಗೆ ಮತ ಚಲಾಯಿಸಿದ 12.13 ಕೋಟಿ ಜನರಿಗೆ ಕೃತಜ್ಞತೆ ಸಲ್ಲಿಸಿದರು. ಪಕ್ಷ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗದಿದ್ದರೂ, ಸಾಕಷ್ಟು ಮತಗಳನ್ನು ಗಳಿಸಿದೆ ಎಂದರು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕೇವಲ 52 ಸಂಸದರು ಆಯ್ಕೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕಳಪೆ ನಿರ್ವಹಣೆ ತೋರಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸತ್‌ನಲ್ಲಿ ಕಾಂಗ್ರೆಸ್ ನಾಯಕರಾಗಿ ಯಾರು ಆಯ್ಕೆಯಾಗುತ್ತಾರೆಂದು ಕಾದು ನೋಡಬೇಕಾಗಿದೆ. ಕಾಂಗ್ರೆಸ್ ಈ ಬಾರಿಯೂ ಅಧಿಕೃತ ವಿಪಕ್ಷ ಸ್ಥಾನಕ್ಕೆ ಅನರ್ಹವಾಗಿದೆ. ಕಳೆದ ಲೋಕಸಭೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News