ಯಡಿಯೂರಪ್ಪ ಹೇಳಿಕೆ ಜನರಲ್ಲಿ ಗೊಂದಲ ಮೂಡಿಸುವ ತಂತ್ರ: ಸಚಿವ ಜಾರ್ಜ್

Update: 2019-06-01 17:38 GMT

ಚಿಕ್ಕಮಗಳೂರು, ಮೇ 30: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಬಿಜೆಪಿಗೆ ನಾಲ್ಕು ಜನ ಶಾಸಕರನ್ನು ಕಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆಂದು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ಅವರು ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹಿರಿಯ ರಾಜಕಾರಣಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಹೀಗಿರುವಾಗ ಅವರು ಇಂತಹ ಕೆಲಸ ಮಾಡುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇನ್ನು, ಕೆ.ಎಸ್.ಈಶ್ವರಪ್ಪ ಎಂತಹ ರಾಜಕೀಯ ಮಾಡುತ್ತಾರೆ ಎಂಬುದು ಇಡೀ ರಾಜ್ಯದ ಜನತೆಗೆ ತಿಳಿದಿದೆ. ಅವರ ಮಾತನ್ನು ನೀವು ನಂಬುತ್ತೀರಾ? ಸಿದ್ದರಾಮಯ್ಯ ಅವರು ಮೊನ್ನೆಯಷ್ಟೆ ಪಕ್ಷದ ಸಭೆ ನಡೆಸಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಸಚಿವರು ಹಾಗೂ ಮುಖಂಡರ ಹೇಳಿಕೆ ಪಡೆದುಕೊಂಡಿದ್ದಾರೆ. ರಾಜ್ಯ ಸರಕಾರಕ್ಕೆ ಯಾವುದೇ ತೊಂದರೆಯಿಲ್ಲ, ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ರಾಜ್ಯದ ಹಿತ ಕಪಾಡುವ ಕೆಲಸ ಮಾಡುತ್ತೀದ್ದೇವೆಂದ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪರವಾಗಿ ಬಂದಿರುವ ಕುರಿತು ಪ್ರತಿಕ್ರಿಯಿಸಿ, ದೇಶದಲ್ಲಿ ನಡೆಯುವ ಪ್ರತಿಯೊಂದು ಚುನಾವಣೆಯೂ ಭಿನ್ನವಾಗಿರುತ್ತದೆ. ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೋಲಿಸುವುದು ಸರಿಯಲ್ಲ. ಲೋಕಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿತ್ತು. ಈಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನತೆ ನಮ್ಮನ್ನು ಬೆಂಬಲಿಸಿದ್ದಾರೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News