ಪರಿಸರ ದಿನಾಚರಣೆ: ಕೊಡಗಿನಲ್ಲಿ 1 ಲಕ್ಷ ಗಿಡ ನೆಡುವ ಗುರಿ
ಮಡಿಕೇರಿ, ಜೂ.1 : ವಿಶ್ವ ಪರಿಸರ ದಿನಾಚರಣೆಯನ್ನು ಇದೇ ಜೂ.11 ರಂದು ನಗರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ 1 ಲಕ್ಷ ಗಿಡ ನೆಡಲು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಇದೇ ಜೂನ್, 11 ರಂದು ವಿಶ್ವ ಪರಿಸರ ದಿನಾಚರಣೆಯನ್ನು ನಗರದಲ್ಲಿ ಪರಿಸರ ಜಾಗೃತಿ ಹಾಗೂ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಪರಿಸರದ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ವಿವಿಧ ಇಲಾಖೆಗಳ ಸಹಕಾರ ಪಡೆಯುವುದರ ಜೊತೆಗೆ ಸರ್ಕಾರೇತರ ಸಂಸ್ಥೆಗಳ ಸಹಕಾರ ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಪರಿಸರ ದಿನಾಚರಣೆಯನ್ನು ಹಿಂದಿನ ಬಾರಿಯಂತೆ ವ್ಯವಸ್ಥಿತವಾಗಿ ಮತ್ತು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಸೂಚನೆ ನೀಡಿದರು.
ಪರಿಸರ ದಿನಾಚರಣೆಯಂದು ನಗರಸಭೆ ವತಿಯಿಂದ ಸ್ತಬ್ಧಚಿತ್ರ ಏರ್ಪಡಿಸುವುದು, ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವುದು ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪಿ.ಶಿವರಾಜು ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಮಾತನಾಡಿ ಕಳೆದ ಬಾರಿಯಂತೆ ಪರಿಸರ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಒತ್ತು ನೀಡಬೇಕು. ಜಿಲ್ಲೆಯಲ್ಲಿ ಎಷ್ಟು ಕೆರೆಗಳಿವೆ. ಅವುಗಳ ಸಂರಕ್ಷಣೆ ಬಗ್ಗೆ ಸಮಿತಿ ರಚನೆ ಅಗತ್ಯ ಎಂದು ನೂರುನ್ನಿಸ ಅವರು ಹೇಳಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜು ಅವರು ಮಾತನಾಡಿ ಅರಣ್ಯ ಇಲಾಖೆಯಿಂದ 1 ಲಕ್ಷ ಗಿಡ ನೀಡಲಾಗುವುದು. ಗಿಡಗಳನ್ನು ಸಂರಕ್ಷಣೆ ಮಾಡುವತ್ತ ಗಮನ ಹರಿಸಬೇಕು ಎಂದು ಅವರು ಸಲಹೆ ಮಾಡಿದರು.
ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರಾದ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸರ್ಕಾರ ಈ ಬಾರಿ ‘ಜಲವರ್ಷ’ವೆಂದು ವಿಶೇಷ ಕಾರ್ಯಕ್ರಮವಾಗಿ ಹಮ್ಮಿಕೊಂಡಿದ್ದು, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ವತಿಯಿಂದ ವಿಶೇಷ ಅಭಿಯಾನ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಬದಿಯಲ್ಲಿ ಗಿಡಗಳನ್ನು ನೆಡುವಂತಾಗಬೇಕು. ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಹಕಾರ ಅಗತ್ಯ ಎಂದರು. ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕರಾದ ಚಂದ್ರಮೋಹನ್ ಅವರು ಮಾತನಾಡಿ ನದಿ ಪಾತ್ರದಲ್ಲಿ ಹೆಚ್ಚಿನ ಗಿಡ ಬೆಳೆಸಬೇಕು. ಸ್ವಚ್ಛತೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ಅವರು ಪ್ರಬಂಧ, ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ, ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳ ಪಟ್ಟಿ ನೀಡಲಾಗುವುದು ಎಂದರು.
ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಅವರು ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ಉತ್ತಮ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿರುವ 3 ಗ್ರಾ.ಪಂ.ಗಳಿಗೆ ಬಹುಮಾನ ನೀಡಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಪಟ್ಟಿ ನೀಡುವಂತಾಗಬೇಕು. ಹಾಗೆಯೇ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ-ಕಾಲೇಜು ತಲಾ ಮೂರು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಕಾರ್ಯಕ್ರಮ ಆಯೋಜನೆ ಸಂಬಂಧ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಜೂನ್ 11 ರಂದು ಪರಿಸರ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಹಾಗೂ ಜಾಥಾವನ್ನು ಜೂನಿಯರ್ ಕಾಲೇಜಿನಲ್ಲಿ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲು ನಿರ್ಧರಿಸಲಾಯಿತು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕಾಶಿನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ.ರವಿಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಸೀಮಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ, ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿ ರಾಘವೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ನಗರಸಭೆ ಇಂಜಿನಿಯರ್ ರೀತು ಇತರರು ಹಾಜರಿದ್ದರು.