ಬರಗಾಲ ಪರಿಸ್ಥಿತಿ ಅಧ್ಯಯನಕ್ಕೆ ರಾಜ್ಯ ಪ್ರವಾಸ: ಬಿ.ಎಸ್.ಯಡಿಯೂರಪ್ಪ

Update: 2019-06-01 17:57 GMT

ಶಿವಮೊಗ್ಗ, ಜೂ. 1: ರಾಜ್ಯದಲ್ಲಿ ಆವರಿಸಿರುವ ತೀವ್ರ ಸ್ವರೂಪದ ಬರಗಾಲ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದ 170 ತಾಲೂಕುಗಳಲ್ಲಿಯೂ ಬರ ಪರಿಸ್ಥಿತಿಯಿದೆ. ನೀರಿನ ಅಭಾವದ ಕಾರಣದಿಂದಲೇ ಧರ್ಮಸ್ಥಳಕ್ಕೆ ಭಕ್ತಾಧಿಗಳು ಬರುವುದು ಬೇಡ ಎಂದು ಪ್ರಕಟಣೆ ಹೊರಡಿಸಲಾಗಿದೆ. ನಾಗರಿಕರು ತೀವ್ರ ಸ್ವರೂಪದ ತೊಂದರೆ ಎದುರಿಸುತ್ತಿದ್ದಾರೆ ಎಂದು ಹೇಳೀದರು.

ಆದರೆ ರಾಜ್ಯ ಸರ್ಕಾರ ಬರ ಪರಿಸ್ಥಿತಿ ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿಗಳು, ಸಚಿವರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಜೂನ್ 5 ರಂದು ಬೆಂಗಳೂರಿನಲ್ಲಿ ಬಿಜೆಪಿಯ ಸಂಸದರು ಹಾಗೂ ಶಾಸಕರ ಸಭೆ ಕರೆಯಲಾಗಿದೆ. ಬರ ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಲಾಗುವುದು. ರಾಜ್ಯ ಸರ್ಕಾರದ ವಿರುದ್ದ ನಡೆಸಬೇಕಾದ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದರು.

ಬಿದ್ದು ಹೋಗಲಿದೆ: ಮೈತ್ರಿ ಪಕ್ಷಗಳ ನಾಯಕರ ಕಚ್ಚಾಟದಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ. ಕೆಲ ದಿನಗಳ ಕಾಲ ನಾವು ಶಾಂತವಾಗಿರುತ್ತೆವೆ. ಸರ್ಕಾರದ ಗೊಂದಲದಲ್ಲಿ ಹಸ್ತಕ್ಷೇಪ ಮಾಡಲು ಹೋಗುವುದಿಲ್ಲ. ಸರ್ಕಾರ ಏನಾಗಲಿದೆ ಎಂದು ಕಾದು ನೋಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. 

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಇನ್ನಷ್ಟು ಸ್ಥಾನಗಳನ್ನು ಗೆಲ್ಲಬೇಕಾಗಿತ್ತು. ಮುಂದಿನ ದಿನಗಳಲ್ಲಿ ನಡೆಯುವ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಸಾಧನೆ ಉತ್ತಮಗೊಳಿಸುವತ್ತ ಗಮನ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಉತ್ತಮ ಸಾಧನೆ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 25 ಸ್ಥಾನಗಳನ್ನು ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ. ಮೀಸಲು ಕ್ಷೇತ್ರಗಳಲ್ಲಿಯೂ ಜಯ ಸಾಧಿಸಿರುವುದು ನಿಜಕ್ಕೂ ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಮೂವರಿಗೆ ಸ್ಥಾನ ದೊರೆತಿದೆ. ಇನ್ನು ಒಂದು ಸಚಿವ ಸ್ಥಾನ ದೊರೆತಿದ್ದರೆ ಚೆನ್ನಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆಯನ್ನು ಎಲ್ಲಾ ರೈತರಿಗೂ ವಿಸ್ತರಿಸಿರುವುದು ಸ್ವಾಗತಾರ್ಹ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News