ಜೂ.21ರಂದು ಗುರುಮಿಠ್ಕಲ್ ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಪುನರಾರಂಭ

Update: 2019-06-03 12:58 GMT

ಬೆಂಗಳೂರು, ಜೂ. 3: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಜೂ.21ರಂದು ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ತಾಲೂಕಿನಲ್ಲಿ ಹಾಗೂ ಜೂ.22ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆಸಲಿದ್ದಾರೆ.

ಅಂತೆಯೇ ಜುಲೈ 5 ಹಾಗೂ 6ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಡೆಸಲಿದ್ದಾರೆ ಎಂದು ಪ್ರಕಟಿಸಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ತಾವು ಪ್ರಾರಂಭಿಸಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಕುರಿತು ತಮ್ಮ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗ್ರಾಮ ವಾಸ್ತವ್ಯವನ್ನು ಸಿಎಂ ಪ್ರಾರಭಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಸರಕಾರದ ಆಡಳಿತ ಚುರುಕುಗೊಳಿಸಲು ಮತ್ತು ಸರಕಾರದ ಯೋಜನೆಗಳ ಅನುಷ್ಠಾನ ಕುರಿತು ಜನಾಭಿಪ್ರಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಡಾ.ಜಿ.ಪರಮೇಶ್ವರ್ ಇದೇ ವೇಳೆ ತಿಳಿಸಿದರು.

ಸಿಎಂ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಠ್ಕಲ್ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ನಡೆಸುವುದಾಗಿ ತಿಳಿಸಿದರು. ಈ ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಡಾ.ಎಸ್.ಸುಬ್ರಹ್ಮಣ್ಯ, ಸಿಎಂ ಅಪರ ಮುಖ್ಯಕಾರ್ಯದರ್ಶಿ ಡಾ.ಈ.ವಿ.ರಮಣ ರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್, ಸಿಎಂ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News