ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರಂದ ಧರಣಿ

Update: 2019-06-04 18:14 GMT

ಬೆಂಗಳೂರು, ಜೂ.4: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಪರವಾಗಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ನೇತೃತ್ವದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿರುವ ಇಬ್ಬರು ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಲು ಮುಂದಾಗಿರುವ ಕಾಂಗ್ರೆಸ್ ನಾಯಕರ ನಡೆ ಖಂಡನೀಯ. ಪಕ್ಷದಲ್ಲಿ ಹಿರಿಯರಿಗೆ ಗೌರವವಿಲ್ಲವೇ ಎಂದು ಮಂಜುನಾಥ್ ರೆಡ್ಡಿ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಪಕ್ಷ ಸಂಘಟನೆಗೆ ರಾಮಲಿಂಗಾರೆಡ್ಡಿ ಪ್ರಯತ್ನ ಹೆಚ್ಚಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದ ಶ್ರೇಯಸ್ಸು ರಾಮಲಿಂಗಾರೆಡ್ಡಿಯವರಿಗೆ ಸಲ್ಲಬೇಕು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಹಿರಿಯರಾದ ರಾಮಲಿಂಗಾರೆಡ್ಡಿಯನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಸಂದರ್ಭದಲ್ಲಿ ರಾಮಲಿಂಗಾರೆಡ್ಡಿಯವರನ್ನು ಪರಿಗಣಿಸದಿದ್ದರೆ, ಅವರ ಬೆಂಬಲಿಗರಾದ ನಾವು ಕಠಿಣವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ಸಂಬಂಧ ಬಿಬಿಎಂಪಿ ಸದಸ್ಯರೆಲ್ಲ ಪ್ರತಿಭಟನಾ ಸಭೆ ನಡೆಸಲು ನಿರ್ಧರಿಸಿದ್ದೇವೆ ಎಂದು ಮಂಜುನಾಥ್ ರೆಡ್ಡಿ ಪ್ರಶ್ನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News