‘ನಿಪಾಹ್ ವೈರಸ್’: ದ.ಕ, ಉಡುಪಿ ಸೇರಿ 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ

Update: 2019-06-06 15:35 GMT

ಬೆಂಗಳೂರು, ಜೂ. 6: ಕೇರಳ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ‘ನಿಪಾಹ್ ವೈರಸ್’ ಸೋಂಕಿನ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೂಕ್ತ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಉತ್ತರ ಕನ್ನಡ, ಶಿವಮೊಗ್ಗ ಭಾಗಕ್ಕೆ ಕೇರಳದಿಂದ ಆಗಮಿಸುವ ಪ್ರಯಾಣಿಕರನ್ನು ತಪಾಸಣೆಗೆ ಗುರಿಪಡಿಸಿ ‘ನಿಫಾ ಸೋಂಕಿನ’ ಬಗ್ಗೆ ಪರಿಶೀಲನೆ ಕೈಗೊಳ್ಳುವಂತೆಯೂ ಸೂಚಿಸಿದೆ.

ಮೇಲ್ಕಂಡ ಜಿಲ್ಲೆಗಳಲ್ಲಿ ಸಮನ್ವಯ ಸಮಿತಿ ಸಭೆಯಲ್ಲಿ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ತಕ್ಷಣ ನಿಪಾಹ್ ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದೆ. ನಿಪಾಹ್ ಸೋಂಕು ಪೀಡಿತ ವ್ಯಕ್ತಿಗಳನ್ನು ಗುರುತಿಸಿ ಅವರಿಗಾಗಿ 2 ಪ್ರತ್ಯೇಕ ಹಾಸಿಗೆಗಳೂ ಸೇರಿ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

ರಾಜ್ಯದಿಂದ ಕೇರಳಕ್ಕೆ ತೆರಳುವವರು ಮಾಸ್ಕ್ ಧರಿಸಿ ತೆರಳುವಂತೆ ಸೂಚಿಸಲಾಗಿದೆ. ಎರ್ನಾಕುಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗೆ ನಿಪಾಹ್ ವೈರಸ್ ಸೋಂಕು ತಗುಲಿದೆ. ಹೀಗಾಗಿ, ರಾಜ್ಯದ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.

ಕರಾವಳಿ ಭಾಗದಲ್ಲಿ ನಿಗಾ: ಕೇರಳದಲ್ಲಿ ಪತ್ತೆಯಾಗಿರುವ ನಿಫಾ ಸೊಂಕು ರಾಜ್ಯದಲ್ಲಿ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ, ರಾಜ್ಯದಲ್ಲಿ ನಿಪಾಹ್ ಸೋಂಕು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಸ್ಪಷ್ಟಣೆ ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇರಳದಲ್ಲಿ ನಿಪಾಹ್ ಮರುಕಳಿಸಿರುವ ಹಿನ್ನೆಲೆಯಲ್ಲಿ ಕೇರಳ ಸಂಪರ್ಕಿಸುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದೇವೆ.
ಆರೋಗ್ಯ ಇಲಾಖಾ ಕಾರ್ಯದರ್ಶಿಯವರನ್ನು ಮಂಗಳೂರಿಗೆ ನಿಯೋಜನೆ ಮಾಡಲಾಗಿದೆ. ಕೇರಳದ ಆರೋಗ್ಯ ಸಚಿವರ ಜತೆಗೆ ಸಮಾಲೋಚನೆ ನಡೆಸಿದ್ದು, ಸಾರ್ಸ್ ವೈರಾಣು ಬಗ್ಗೆ ಕೇಂದ್ರದ ಸೂಚನೆಗಳು ರಾಜ್ಯಕ್ಕೆ ಬಂದಿವೆ. ಈ ಬಗ್ಗೆಯೂ ಎಚ್ಚರಿಕೆ ವಹಿಸಿದ್ದೇವೆ. ವಾಂತಿ, ಜ್ವರ ಕಾಣಿಸಿಕೊಂಡರೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News