ರೋಷನ್ ಬೇಗ್ ವಿರುದ್ಧ ಹೈಕಮಾಂಡ್‌ಗೆ ದೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

Update: 2019-06-07 13:04 GMT

ಬೆಂಗಳೂರು, ಜೂ. 7: ಹಿರಿಯ ಮುಖಂಡರ ವಿರುದ್ಧ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದ ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ತಾನು ಸೇರಿದಂತೆ ಹಲವರ ವಿರುದ್ಧ ರೋಷನ್ ಬೇಗ್ ಟೀಕಿಸಿದ್ದರು. ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇದರಿಂದ ಪಕ್ಷದ ಘನತೆಗೆ ಕುಂದುಂಟಾಗಿದೆ ಎಂದರು.

ಬೇಗ್ ಅವರ ಎಲ್ಲ ಹೇಳಿಕೆಗಳನ್ನು ಸಂಗ್ರಹಿಸಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಅಲ್ಲದೆ ಸೂಕ್ತ ಕ್ರಮ ಜರುಗಿಸುವಂತೆಯೂ ಮನವಿ ಮಾಡಲಾಗಿದೆ. ಅವರ ವಿರುದ್ಧದ ಶಿಸ್ತು ಕ್ರಮದ ಬಗ್ಗೆ ರಾಷ್ಟ್ರ ನಾಯಕರು ನಿರ್ಧರಿಸಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಣೆ ನೀಡಿದರು.

ಸಂಪುಟದಲ್ಲಿ ಅವಕಾಶ: ಪಕ್ಷ ಎಂದೂ ಯಾರನ್ನು ಕಡೆಗಣಿಸಿಲ್ಲ. ರಾಮಲಿಂಗಾರೆಡ್ಡಿ ಸಂಯೋಜಕ ಸಮಿತಿ ಅಧ್ಯಕ್ಷರು. ಹೀಗಾಗಿ ಅವರಿಗೆ ಅವಕಾಶ ಸಿಗಲಿದೆ. ಪಕ್ಷದಲ್ಲಿ ಶಿಸ್ತಿನಿಂದ ಇರುವವರಿಗೆ ಸಂಪುಟದಲ್ಲಿ ಅವಕಾಶ ದೊರೆಯಲಿದೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಮಾಹಿತಿ ಇಲ್ಲ. ವಿಸ್ತರಣೆ ಆದರೆ, ಹೊಸಬರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ದಿನೇಶ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News