ಮೈತ್ರಿ ಸರಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ: ಎಚ್.ಡಿ.ದೇವೇಗೌಡ

Update: 2019-06-07 17:33 GMT

ಬೆಂಗಳೂರು, ಜೂ.7: ಸಮ್ಮಿಶ್ರ ಸರಕಾರದ ಬಗ್ಗೆ ಯಾವುದೆ ಅಪನಂಬಿಕೆ ಬೇಡ. ಮುಂದಿನ ನಾಲ್ಕು ವರ್ಷ ಮೈತ್ರಿ ಸರಕಾರ ಯಾವುದೆ ಸಮಸ್ಯೆಯಿಲ್ಲದೆ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಶುಕ್ರವಾರ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿರುವ ಬಗ್ಗೆ ಪಕ್ಷದ ಯಾವೊಬ್ಬ ಕಾರ್ಯಕರ್ತರು ದೃತಿಗೇಡಬೇಕಿಲ್ಲ. ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸೋಣವೆಂದು ತಿಳಿಸಿದರು.

ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಮಾತನಾಡಿ, ರಾಜ್ಯಾದ್ಯಂತ ತಿರುಗಾಡಿ ಜೆಡಿಎಸ್‌ನ್ನು ಬಲಿಷ್ಠಗೊಳಿಸಲಾಗುವುದು. ಜೆಡಿಎಸ್ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಮುಖಂಡರು ರಾಜ್ಯಾದ್ಯಂತ ತಿರುಗಾಡಿ ಪಕ್ಷದ ಸಂಘಟನೆಯಲ್ಲಿ ಪರಸ್ಪರ ಕೈ ಜೋಡಿಸುವ ಅಗತ್ಯವಿದೆ ಎಂದರು.

ಹಾಸನದ 102, ಮಂಡ್ಯ 96, ಮೈಸೂರು 6, ತುಮಕೂರು 66, ರಾಯಚೂರು 43 ಮಂದಿ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ 579 ಚುನಾಯಿತ ಅಭ್ಯರ್ಥಿಗಳಿಗೆ ಸನ್ಮಾನ ಏರ್ಪಡಿಸಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಆರಂಭಿಸುತ್ತಿರುವುದಕ್ಕೆ ಪಕ್ಷದ ಸ್ಥಳೀಯ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News