ಜೂ.9ರಂದು ಬನ್ನಂಜೆಯಲ್ಲಿ ಪ್ರತಿಭಾ ಪುಸ್ಕಾರ- ನೋಟ್ ಪುಸ್ತಕ ವಿತರಣೆ
ಉಡುಪಿ, ಜೂ.7: ಕರ್ನಾಟಕ ರಾಜ್ಯ ಸರಕಾರಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಒಕ್ಕೂಟದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬನ್ನಂಜೆಯ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಜೂ.9ರಂದು ಬೆಳಿಗ್ಗೆ 10ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಉದ್ಘಾಟಿಸುವರು. ಈ ಸಂದರ್ಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಎಸೆಸೆಲ್ಸಿ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ದಾಸ್‌ಪ್ರಕಾಶ್, ಉಪಾ ಧ್ಯಕ್ಷ ನಾಗಸಿದ್ಧಾರ್ಥ್ ಹೊಲೆಯಾರ್, ಧರ್ಮಗುರು ವಿಲಿಯಂ ಮಾರ್ಟಿಸ್, ಹೂಡೆ ಸಾಲಿಹತ್ ಸಮೂಹ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಮೊಹಮ್ಮದ್ ಇದ್ರಿಸ್, ಅಖಿಲ ಭಾರತ ಎಸ್ಸಿಎಸ್ಟಿ ರೈಲ್ವೆ ನೌಕರರ ಸಂಘದ ಅಧ್ಯಕ್ಷ ನಾರಾಯಣ ದಾಸ್ ಅಹಿವಾರ್ ಭಾಗವಹಿಸಲಿರುವರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಘಟಕದ ಕಾರ್ಯದರ್ಶಿ ರಮೇಶ್ ರಘುರಾಮ್, ಕೋಶಾಧಿಕಾರಿ ಆನಂದ ಬ್ರಹ್ಮಾವರ, ಸಂಘಟನಾ ಕಾರ್ಯ ದರ್ಶಿಗಳಾದ ಪುಷ್ಪಾಕರ್, ಶಂಕರ್ ಉಪಸ್ಥಿತರಿದ್ದರು.