ಎಸ್.ಮೂರ್ತಿ ಅಮಾನತು ವಿಚಾರ: ದಾಖಲೆಗಳನ್ನು ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಜೂ.7: ವಿಧಾನಸಭೆ ಕಾರ್ಯದರ್ಶಿ ಆಗಿದ್ದ ಎಸ್.ಮೂರ್ತಿ ಅವರನ್ನು ಅಮಾನತುಗೊಳಿಸುವ ದಿಸೆಯಲ್ಲಿ ವಿಧಾನಸಭೆ ವಿಶೇಷ ಮಂಡಳಿ ಕೈಗೊಂಡ ಕಲಾಪ ಪ್ರಕ್ರಿಯೆಗಳ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಿ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಅಮಾನತು ಆದೇಶಕ್ಕೆ ತಡೆ ನೀಡಬೇಕು ಎಂಬ ಎಸ್.ಮೂರ್ತಿ ಅವರ ಕೋರಿಕೆಯನ್ನು ತಿರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಎಸ್.ಮೂರ್ತಿ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಮೂರ್ತಿ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ಅಮಾನತು ಆದೇಶವನ್ನು ಸಕ್ಷಮ ಪ್ರಾಧಿಕಾರ ನೀಡಿಲ್ಲ. ಅಧೀನ ಅಧಿಕಾರಿ ನೀಡಿದ್ದಾರೆ. ಆರೋಪಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ವಿಶೇಷ ಮಂಡಳಿ ವಿಚಾರಣೆಯನ್ನೇ ನಡೆಸಿಲ್ಲ ಎಂದು ಆಕ್ಷೇಪಿಸಿದರು.
ಇದಕ್ಕೆ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಮೇಲ್ನೋಟಕ್ಕೆ ಆರೋಪಗಳಲ್ಲಿ ಸತ್ಯಾಂಶವಿದೆ ಎಂಬ ಕಾರಣಕ್ಕಾಗಿಯೇ ವಿಶೇಷ ಮಂಡಳಿ ಅಮಾನತು ನಿರ್ಣಯ ಕೈಗೊಂಡಿದೆ ಎಂದು ಪ್ರತಿಪಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ದಾಖಲೆಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ಎಂದು ಸೂಚಿಸಿ ವಿಚಾರಣೆಯನ್ನು ಜೂ.10ಕ್ಕೆ ಮುಂದೂಡಿದೆ