×
Ad

ಉಡುಪಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1589 ವಿದ್ಯಾರ್ಥಿಗಳು

Update: 2019-06-07 21:56 IST

ಉಡುಪಿ, ಜೂ.7: ಇದೇ ಜೂ.11ರಿಂದ 20ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 1,589 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಜಿಲ್ಲೆಯಲ್ಲಿ ಕಾರ್ಕಳದ ಭುವನೇಂದ್ರ ಪದವಿ ಪೂರ್ವ ಕಾಲೇಜು, ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಎಂಜಿಎಂ ಪದವಿ ಪೂರ್ವ ಕಾಲೇಜು ಹಾಗೂ ಕುಂದಾಪುರದ ಭಂಡಾರ್‌ಕಾರ್ಸ್‌ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿವೆ. ಕಲಾ ವಿಭಾಗದಲ್ಲಿ 170 ಬಾಲಕರು ಮತ್ತು 125 ಬಾಲಕಿಯರು, ವಿಜ್ಞಾನ ವಿಭಾಗದಲ್ಲಿ 268 ಬಾಲಕರು, 198 ಬಾಲಕಿಯರು, ವಾಣಿಜ್ಯ ವಿಭಾಗದಲ್ಲಿ 586 ಬಾಲಕರು ಮತ್ತು 242 ಬಾಲಕಿಯರು ಸೇರಿದಂತೆ ಒಟ್ಟು 1589 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದವರು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಬೇರೆ ಜಿಲ್ಲೆಯ ಇಬ್ಬರು ಹಿರಿಯ ಉಪನ್ಯಾಸಕರನ್ನು ಜಾಗೃತ ದಳದ ಸದಸ್ಯರನ್ನಾಗಿ ನೇಮಿಸಲಾಗಿದೆ. ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಬಿಗಿ ಭದ್ರತೆಯಲ್ಲಿ ಇಡಲು ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಖಜಾನೆಯಲ್ಲಿ ಸಿಸಿ ಕೆಮರಾ ಅಳವಡಿಸಲಾಗಿದೆ ಎಂದರು.

ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗಲು 3 ಸದಸ್ಯರ ಅಧಿಕಾರಿಗಳ ತಂಡ ರಚಿಸಿದ್ದು, ಖಜಾನೆಯಲ್ಲಿ ಪ್ರಶ್ನೆಪತ್ರಿಕೆ ಹ್ಯಾಂಡಲ್ ಮಾಡುವ ಎಲ್ಲರಿಗೂ ಗುರುತಿನ ಚೀಟಿ ವಿತರಣೆ ಹಾಗೂ ಎಲ್ಲರ ಬಯೋಮೆಟ್ರಿಕ್ ನೊಂದಣಿ ಮಾಡಲಾಗಿದೆ. ಖಜಾನೆಯಲ್ಲಿ ಬಯೋಮೆಟ್ರಿಕ್ ಯಂತ್ರಗಳನ್ನು ಅಳವಡಿಸಲಾ ಗಿದೆ ಹಾಗೂ ಬಾರ್ ಕೋಡಿಂಗ್ ರೀಡರ್ ಅಳವಡಿಸಲಾಗಿದೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದು ಹೆಪ್ಸಿಬಾ ರಾಣಿ ತಿಳಿಸಿದರು.

ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಲು ಕಾರಣವಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲಾ ಪಿಯು ಕಾಲೇಜುಗಳು ಉಪನ್ಯಾಸಕರನ್ನು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಭಿನಂದಿಸಿದರು.

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಪಿಯು ಇಲಾಖೆಯ ಉಪ ನಿರ್ದೇಶಕ ಸುಬ್ರಹ್ಮಣ್ಯ ಜೋಶಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಡಿಡಿಪಿಐ ಶೇಷಶಯನ ಕಾರಿಂಜ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News