ಮೈತ್ರಿ ಮುಂದುವರೆದರೆ ಕಾಂಗ್ರೆಸ್ ಭವಿಷ್ಯಕ್ಕೆ ಧಕ್ಕೆ: ಮಾಜಿ ಸಚಿವ ಚಲುವರಾಯಸ್ವಾಮಿ

Update: 2019-06-07 18:03 GMT

ಮಂಡ್ಯ, ಜೂ.7: ಜೆಡಿಎಸ್ ಜತೆ ಮೈತ್ರಿ ಮುಂದುವರೆದರೆ ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೆ ಧಕ್ಕೆ ಆಗಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈತ್ರಿಯಿಂದ ಕಾಂಗ್ರೆಸ್‍ಗೆ ಉಪಯೋಗವಿಲ್ಲ. ಈ ಬಗ್ಗೆ ಪಕ್ಷದ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದರು.

ಮೈತ್ರಿ ವಿಚಾರದಲ್ಲಿ ರಾಷ್ಟ್ರದ ನಾಯಕರು ತೆಗೆದುಕೊಂಡಿರುವ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ಆದರೆ, ಇದೇ ರೀತಿ ಮುಂದುವರೆದರೆ ಕಾಂಗ್ರೆಸ್ ಪಕ್ಷ ಬಹಳ ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತೆ ಎಂದು ಅವರು ಪ್ರತಿಕ್ರಿಯಿಸಿದರು.

ನಮ್ಮ ಪಕ್ಷದ ನಾಯಕರು ಈಗಿನ ಪರಿಸ್ಥಿತಿಯನ್ನು ಸರಿಪಡಿಸಬೇಕು. ಅದಾಗದಿದ್ದರೆ ಎಲ್ಲಾ ಮುಖಂಡರು ತೀರ್ಮಾನ ತೆಗೆದುಕೊಂಡು ಪಕ್ಷ ಉಳಿಸಿಕೊಳ್ಳುವ ಜವಾಬ್ಧಾರಿ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

ಮೈತ್ರಿ ವಿಚಾರದಲ್ಲಿ ಪಕ್ಷದ ತೀರ್ಮಾನವನ್ನು ಪ್ರಶ್ನೆ ಮಾಡುವುದಕ್ಕೆ ಹೋಗುವುದಿಲ್ಲ. ಆದರೆ, ವಿದ್ಯಮಾನಗಳು, ನಡವಳಿಕೆ ನೋಡುತ್ತಿದ್ದರೆ ಪಕ್ಷಕ್ಕೆ ಒಳ್ಳೆಯ ಭವಿಷ್ಯ ಕಾಣುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯ ಫಲಿತಾಂಶ ನೋಡಿದ ಮೇಲೂ ಬುದ್ದಿ ಕಲಿಯದಿದ್ದರೆ ನೋವು ಅನುಭವಿಸಬೇಕಾಗುತ್ತದೆ. ನನ್ನೊಬ್ಬನ ಕೈಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಮತ್ತೆ ಮುಂದುವರೆದರೆ ಜನರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಬಿಡಿ ಎಂದು ಅವರು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News