'ಬಿಜೆಪಿ ಸೇರ್ಪಡೆ' ಕುರಿತ ಪ್ರಶ್ನೆಗೆ ಸುಮಲತಾ ಅಂಬರೀಶ್ ಉತ್ತರಿಸಿದ್ದು ಹೀಗೆ...

Update: 2019-06-08 17:31 GMT

ಬೆಂಗಳೂರು, ಜೂ.8: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ದಾಖಲಿಸಿರುವ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲಿ ತಮಗೆ ಬೆಂಬಲ ನೀಡಿದ ಬಿಜೆಪಿ ನಾಯಕರಿಗೆ ಕೃತಜ್ಞತೆ ಸಲ್ಲಿಸಲು ಶನಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ಸುಮಲತಾ ಅವರನ್ನು ಸ್ವಾಗತಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ, ಮಂಡ್ಯದಲ್ಲಿ ನನ್ನ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೆ, ನನಗೆ ಬಹಿರಂಗ ಬೆಂಬಲ ನೀಡಿದರು. ಹೀಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ ಎಂದರು.

ಇದೇ ವೇಳೆ ಬಿಜೆಪಿ ಸೇರ್ಪಡೆಯಾಗುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂಬುದರ ಕುರಿತು ಜನರ ಅಭಿಪ್ರಾಯವನ್ನು ಪಡೆದು ಮುಂದಿನ ಕ್ರಮ ತೀರ್ಮಾನ ಕೈಗೊಳ್ಳುತ್ತೇನೆ. ಮಂಡ್ಯ ಜನರ ಅಭಿಪ್ರಾಯದಂತೆ ಬಿಜೆಪಿ ಸೇರಬೇಕೆ, ಬೇಡವೇ ಎಂಬುದರ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ತಮ್ಮಣ್ಣ ವಿರುದ್ಧ ಆಕ್ರೋಶ

ಮಂಡ್ಯದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಸಾರ್ವಜನಿಕರನ್ನು ಬೆದರಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವರಾಗಿ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಅವರಿಗೆ ಮತಹಾಕಿ ಗೆಲ್ಲಿಸಿರೋದು ಮಂಡ್ಯ ಜನರು. ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಸವಾಲು ಹಾಕಿದರು. ಚುನಾವಣೆ ಬಳಿಕ ಈ ರೀತಿಯ ಸೇಡಿನ ರಾಜಕಾರಣ ಮಾಡುವುದು ಸರಿಯಲ್ಲ. ನಿಮ್ಮ ಕೈಯಲ್ಲಿ ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ. ಕೆಲಸ ಮಾಡುವ ಜನನಾಯಕರು ತುಂಬಾ ಜನ ಇದ್ದಾರೆ ಎಂದು ಸುಮಲತಾ ಅಂಬರೀಶ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News