ಹಿರಿಯ ಸಾಹಿತಿ, ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್ ಇನ್ನಿಲ್ಲ

Update: 2019-06-10 04:20 GMT

ಬೆಂಗಳೂರು, ಜೂ.10: ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ, ರಂಗಭೂಮಿ ತಜ್ಞ, ಚಿತ್ರನಟ ಗಿರೀಶ್ ಕಾರ್ನಾಡ್ ಅವರು ಇಂದು ಬೆಳಗ್ಗೆ ನಗರದ ಲ್ಯಾವಿಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

 ಕೆಲ ದಿನಗಳಿಂದ ಬಹು ಅಂಗಾಂಗ ವೈಫಲ್ಯದ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದ ಕಾರ್ನಾಡ್ ಅವರು ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1998ರಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿರುವ ಕಾರ್ನಾಡ್ ಅವರು ಕರ್ನಾಟಕಕ್ಕೆ ಏಳನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು. ಗಿರೀಶ್ ಕಾರ್ನಾಡ್ 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಉತ್ತರ ಕನ್ನಡದ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ, ಧಾರವಾಡದ ಬಾಸೆಲ್ ಮಿಷನ್ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಹಾಗೂ ಪದವಿ ಶಿಕ್ಷಣವನ್ನು ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪಡೆದಿದ್ದರು. ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್‌ಶಿಪ್ ಪಡೆದು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದ್ದರು.

ಮದ್ರಾಸ್‌ನಲ್ಲಿ ನೌಕರಿಯಲ್ಲಿದ್ದ ಇವರು ಶಿಕಾಗೋ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಇಂಗ್ಲೆಂಡಿನಲ್ಲಿ ನೆಹರೂ ಸೆಂಟರ್ ಅಧ್ಯಕ್ಷರಾಗಿ, ಪೂನಾ ಫಿಲ್ಮ್ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು.

ಕಾರ್ನಾಡ್ ಅವರು ಕನ್ನಡದಲ್ಲಿ ನಾಟಕ ರಚಿಸುತ್ತಾ ಇತರ ಭಾರತೀಯ ಭಾಷೆಗಳೊಡನೆ ಸಂಪರ್ಕವನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಾಂಸ್ಕೃತಿಕ ವಕ್ತಾರರಾಗಿ ದುಡಿದವರು. ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ಮುಂತಾದವು ಕಾರ್ನಾಡ್ ಅವರ ಪ್ರಮುಖ ನಾಟಕ ಕೃತಿಗಳು. ಜೊತೆಗೆ ಕನ್ನಡ, ಹಿಂದಿ, ತಮಿಳು ಸಹಿತ ಹಲವು ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿರುವ ಕಾರ್ನಾಡ್ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರೂ ಆಗಿದ್ದರು.

 ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡತಿ, ಉತ್ಸವ್ ಮುಂತಾದ ಸಿನಿಮಾಗಳು; ಸೂಫಿ ಪಂಥ, ಕನಕ ಪುರಂದರ ಸಾಕ್ಷಚಿತ್ರಗಳನ್ನೂ ಅವರು ನಿರ್ದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News