ಸಿಎಂ ಗ್ರಾಮ ವಾಸ್ತವ್ಯ: ಜಿಲ್ಲಾಡಳಿತಕ್ಕೆ ರಾಜ್ಯ ಸರಕಾರ ಮಾರ್ಗಸೂಚಿ

Update: 2019-06-10 14:29 GMT

ಬೆಂಗಳೂರು, ಜೂ. 10: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳಿಗೆ ರಾಜ್ಯ ಸರಕಾರ ಮಾರ್ಗಸೂಚಿಗಳನ್ನು ನೀಡಿದೆ.

ಗ್ರಾಮ ವಾಸ್ತವ್ಯಕ್ಕೆ ಅನುಕೂಲಕರವಾದ ಸರಕಾರಿ ಶಾಲೆ, ಸಾರ್ವಜನಿಕರ ಭೇಟಿ ಮತ್ತು ಸಂವಾದ ನಡೆಸಲು ವಿಸ್ತಾರ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ಅಭಿಪ್ರಾಯ ಪಡೆದು ಗುರುತಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು, ಸಂವಾದ ನಡೆಸಲು ಅನುಕೂಲ ಆಗುವಂತೆ ವೇದಿಕೆ ನಿರ್ವಹಣೆ ಮಾಡಬೇಕು. ಅಲ್ಲದೆ, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಸ್ಥಳೀಯ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ರಚಿಸುವಂತೆ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿಗಳಿಗೆ ಸ್ವೀಕೃತಿಯನ್ನು ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮುಖ್ಯಮಂತ್ರಿ ಅವರ ಜನತಾದರ್ಶನ ಶಾಖೆಯ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕು. ವಾರ್ತಾ ಇಲಾಖೆ ಸಿದ್ಧಪಡಿಸುವ ಸ್ಥಳೀಯ ರೈತರಿಗೆ ಮಾಹಿತಿ ನೀಡುವ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಲು ಧ್ವನಿವರ್ಧಕ ಮತ್ತಿತರ ಸಿದ್ಧತೆ ಮಾಡಿಕೊಳ್ಳಬೇಕು. ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ ಮಾಹಿತಿ ನೀಡುವ ನುರಿತ ತಜ್ಞರನ್ನು ಆಹ್ವಾನಿಸಿ ಅವರಿಂದ ಮಾಹಿತಿ ವಿನಿಮಯ ಮಾಡಿಕೊಳ್ಳುವುದು ಎಂದು ಸೂಚಿಸಲಾಗಿದೆ.

ಸಂಜೆ 6 ಗಂಟೆ ನಂತರ ವಾಸ್ತವ್ಯ ಮಾಡುವ ಸ್ಥಳದಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಮತ್ತು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವುದು, ಗ್ರಾಮ ವಾಸ್ತವ್ಯದ ಶಾಲೆ ಹಾಗೂ ಆ ಗ್ರಾಮದ ಎಲ್ಲ ಶಾಲೆಗಳ ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯವನ್ನು ಶಾಶ್ವತವಾಗಿ ಸುಧಾರಣೆ ಮಾಡುವುದು.

ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಮೂಲಭೂತ ಸಮಸ್ಯೆಗಳನ್ನು ಪಟ್ಟಿ ಮಾಡಿ ಆದ್ಯತೆ ಮೇರೆಗೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯವಾಗಿ ಕಂಡುಬರುವ ಬೇಡಿಕೆಗಳನ್ನು ಆಯಾ ಇಲಾಖೆಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು ಸೇರಿದಂತೆ 13 ಮಾರ್ಗಸೂಚಿಗಳನ್ನು ನೀಡಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News